ADVERTISEMENT

ಮುಷ್ಕರಕ್ಕೆ ಬೆಂಬಲ: ಸಂಘಟನೆಗಳ ಪ್ರತಿಭಟನೆ

ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಮೆರವಣಿಗೆ: ಜಿಲ್ಲಾಧಿಕಾರಿಗೆ ಮನವಿಪತ್ರ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 8 ಜನವರಿ 2020, 15:56 IST
Last Updated 8 ಜನವರಿ 2020, 15:56 IST
ವಿಜಯಪುರದಲ್ಲಿ ಬುಧವಾರ ರಾಜ್ಯ ಅಂಗನವಾಡಿ ನೌಕರರ ಸಂಘದ ಕಾರ್ಯಕರ್ತೆಯರು ಪ್ರತಿಭಟನೆ ಮಾಡಿದರು
ವಿಜಯಪುರದಲ್ಲಿ ಬುಧವಾರ ರಾಜ್ಯ ಅಂಗನವಾಡಿ ನೌಕರರ ಸಂಘದ ಕಾರ್ಯಕರ್ತೆಯರು ಪ್ರತಿಭಟನೆ ಮಾಡಿದರು   

ವಿಜಯಪುರ: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಮತ್ತು ನಿರ್ಧಾರಗಳ ವಿರುದ್ಧ ವಿವಿಧ ಕಾರ್ಮಿಕ ಸಂಘಟನೆಗಳು ಬುಧವಾರ ಕರೆ ನೀಡಿದ್ದ ಮುಷ್ಕರಕ್ಕೆ ಬೆಂಬಲ ಸೂಚಿಸಿ ಹಲವು ಸಂಘಟನೆಗಳು ನಗರದಲ್ಲಿ ಪ್ರತಿಭಟನೆ ಮಾಡಿದವು.

ಇಲ್ಲಿಯ ಸಿದ್ಧೇಶ್ವರ ದೇವಸ್ಥಾನ ಎದುರು ಜಮಾಯಿಸಿದ ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಮೆರವಣಿಗೆ ಮೂಲಕ ಮಹಾತ್ಮ ಗಾಂಧಿ ಚೌಕ್‌, ಬಸವೇಶ್ವರ ವೃತ್ತ, ಡಾ.ಬಿ.ಆರ್‌.ಅಂಬೇಡ್ಕರ್‌ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಕೆಲಹೊತ್ತು ಘೋಷಣೆ ಕೂಗಿದರು. ಬಳಿಕ ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.

ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಅಣ್ಣಾರಾಯ ಈಳಗೇರ ಮಾತನಾಡಿ, ‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಕಾರ್ಮಿಕರ ಕಾಯ್ದೆಗಳನ್ನು ಮಾಲೀಕರ ಪರವಾಗಿ ಬದಲಾಯಿಸುತ್ತಿದೆ. ರೈಲ್ವೆ, ಗಣಿ, ರಕ್ಷಣೆ, ಕಲ್ಲಿದ್ದಲು ಸೇರಿದಂತೆ ಸಾರ್ವಜನಿಕ ಉದ್ದಿಮೆಗಳಲ್ಲಿ ಶೇ 100ರಷ್ಟು ವಿದೇಶಿ ಬಂಡವಾಳಕ್ಕೆ ಅವಕಾಶ ನೀಡುವ ಮೂಲಕ ಖಾಸಗೀಕರಣಕ್ಕೆ ಮುಂದಾಗಿದೆ. ಕೇಂದ್ರದ ತಪ್ಪು ನಿರ್ಧಾರಗಳಿಂದ ಆರ್ಥಿಕ ಕುಸಿತ, ಉದ್ಯೋಗ ನಾಶ, ನಿರುದ್ಯೋಗ ಹೆಚ್ಚಳ, ಆದಾಯ ಕುಸಿಯುತ್ತಿದೆ’ ಎಂದು ಕಿಡಿಕಾರಿದರು.

ADVERTISEMENT

ಎಐಯುಟಿಯುಸಿ ಮುಖಂಡ ಭಿ.ಭಗವಾನರೆಡ್ಡಿ ಹಾಗೂ ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಭೀಮಶಿ ಕಲಾದಗಿ ಮಾತನಾಡಿ, ‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾರ್ಮಿಕರ ಬೇಡಿಕೆಗಳನ್ನು ಪರಿಗಣಿಸದೆ, ಬಂಡವಾಳಶಾಹಿ ಪರ ನಿಲುವುಗಳನ್ನು ಜಾರಿಗೊಳಿಸುತ್ತಿವೆ. ರೈತರು ಬೆಳೆದ ಉತ್ಪನ್ನಗಳಿಗೆ ಸೂಕ್ತ ಬೆಲೆ ನೀಡುತ್ತಿಲ್ಲ. ಇದರಿಂದ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಕೇಂದ್ರ ಸರ್ಕಾರದ ತಪ್ಪು ನಿರ್ಧಾರಗಳಿಂದ ಕಾರ್ಮಿಕರು ಕೆಲಸ ಕಳೆದುಕೊಳ್ಳುತ್ತಿದ್ದಾರೆ. ನಿರುದ್ಯೋಗ ತಾಂಡವವಾಡುತ್ತಿದೆ’ ಎಂದು ಆರೋಪಿಸಿದರು.

ಬ್ಯಾಂಕ್‌ ನೌಕರರ ಸಂಘದ ಮುಖಂಡ ಸಿ.ಎ.ಗಂಟೆಪ್ಪಗೋಳ, ರೈತ ಮುಖಂಡ ಅರವಿಂದ ಕುಲಕರ್ಣಿ, ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಸುನಂದಾ ನಾಯಕ ಮಾತನಾಡಿದರು.

ಎಐಟಿಯುಸಿ, ಸಿಐಟಿಯು, ಎಐಯುಟಿಯುಸಿ, ಎಸ್‍ಐಎಫ್‌ಟಿ, ಬ್ಯಾಂಕ್‌ ನೌಕರರ ಸಂಘ, ಗ್ರಾಮ ಪಂಚಾಯಿತಿ ನೌಕರರ ಸಂಘ, ಅಂಗನವಾಡಿ ನೌಕರರ ಸಂಘ, ಬಿಸಿಯೂಟ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಜನವಾದಿ ಮಹಿಳಾ ಸಂಘ, ಕರ್ನಾಟಕ ಪ್ರಾಂತ ರೈತ ಸಂಘ, ಅಖಿಲ ಭಾರತ ಕಿಸಾನ ಸಭಾ, ರೈತ- ಕೃಷಿ- ಕಾರ್ಮಿಕರ ಸಂಘಟನೆ, ಅಖಂಡ ಕರ್ನಾಟಕ ರೈತ ಸಂಘ, ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ, ಗಾರ್ಡನ್‌ ನೌಕರರು, ಲಾರಿ ಹಮಾಲರ ಸಂಘ, ನಗರ ನೀರು ಸರಬರಾಜು ಮತ್ತು ಒಳಚರಂಡಿ ಹೊರ ಗುತ್ತಿಗೆ ನೌಕಕರು, ವಸತಿ ನಿಲಯ ಕಾರ್ಮಿಕರು, ಕೆಎಸ್‌ಆರ್‌ಟಿಸಿ ಸ್ಟಾಫ್ ಅಂಡ್ ವರ್ಕರ್ಸ್‌ ಯೂನಿಯನ್‌, ಕಟ್ಟಡ ಕಾರ್ಮಿಕರ ಸಂಘ, ಆಲ್ ಅಮಿನ್‌ ನೌಕರರ ಸಂಘ, ಬಿಎಸ್‍ಎನ್‍ಎಲ್ ನೌಕರರ ಸಂಘ, ಮರ್ಚಂಟ್ಸ್‌ ಅಸೋಸಿಯೇಷನ್‌ ಸೇರಿದಂತೆ ಹಲವು ಸಂಘಟನೆಗಳು ಪಾಲ್ಗೊಂಡಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.