ADVERTISEMENT

ಕೇಂದ್ರ ಅನುದಾನ ನೀಡಿಲ್ಲ ಎಂಬುದು ಹಸಿ ಸುಳ್ಳು: ಹನುಮಂತ ನಿರಾಣಿ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2024, 15:31 IST
Last Updated 7 ಮಾರ್ಚ್ 2024, 15:31 IST
ಹನುಮಂತ ನಿರಾಣಿ
ಹನುಮಂತ ನಿರಾಣಿ   

ವಿಜಯಪುರ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ರಾಜ್ಯಕ್ಕೆ ಅನುದಾನ ನೀಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪದೇಪದೇ ಸುಳ್ಳು ಹೇಳುತ್ತಿದ್ದಾರೆ. ಇದು ಸತ್ಯಕ್ಕೆ ದೂರವಾದ ಮಾತು ಎಂದು ವಿಧಾನ ಪರಿಷತ್‌ ಸದಸ್ಯ ಹನುಮಂತ ನಿರಾಣಿ ಹೇಳಿದರು.

ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಹಿಂದಿನ ಯುಪಿಎ ಸರ್ಕಾರದ ಅವಧಿಗಿಂತ ಹೆಚ್ಚಿನ ಅನುದಾನ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬಂದಿದೆ. 2004–14ರ ವರೆಗೆ ಮನಮೋಹನ್‌ ಸಿಂಗ್‌ ಅವಧಿಯಲ್ಲಿ ₹81 ಸಾವಿರ ಕೋಟಿ ಅನುದಾನ ರಾಜ್ಯಕ್ಕೆ ಬಂದಿದೆ. ಆದರೆ, 2014–24ರ ವರೆಗೆ ಮೋದಿ ಅವಧಿಯಲ್ಲಿ ₹2.82 ಸಾವಿರ ಕೋಟಿ ಅನುದಾನ ರಾಜ್ಯಕ್ಕೆ ನೀಡಲಾಗಿದೆ ಎಂದರು. 

ADVERTISEMENT

ಕಾಂಗ್ರೆಸ್‌ ಸರ್ಕಾರ ವೈಫಲ್ಯ:

ವಿಧಾನ ಪರಿಷತ್‌ ಸದಸ್ಯ ವಿ.ಎಸ್‌.ಸಂಕನೂರ ಮಾತನಾಡಿ, ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್‌ ಸರ್ಕಾರ ಜನರ ಆಶೋತ್ತರ, ನಿರೀಕ್ಷೆಗೆ ತಕ್ಕಂತೆ ಆಡಳಿತ ನಡೆಸುತ್ತಿಲ್ಲ. ಏತಕ್ಕಾದರೂ ಕಾಂಗ್ರೆಸ್‌ಗೆ ಮತ ಹಾಕಿದ್ದೇವೆ ಎಂದು ಬೇಸರ ವ್ಯಕ್ತಪಡಿಸುತ್ತಿದ್ದಾರೆ ಎಂದರು.

ರಾಜ್ಯಕ್ಕೆ ಎದುರಾಗಿರುವ ಭೀಕರ ಬರಗಾಲವನ್ನು ಸರ್ಕಾರ ಸರಿಯಾಗಿ ನಿರ್ವಹಣೆ ಮಾಡಿಲ್ಲ, ಸಾಲ ಮನ್ನಾ ಮಾಡುತ್ತಾರೆ ಎಂಬ ನಿರೀಕ್ಷೆ ಹುಸಿಯಾಗಿದೆ. ₹2 ಸಾವಿರ ಪರಿಹಾರ ರೈತರಿಗೆ ತಲುಪಿಲ್ಲ ಎಂದು ಆರೋಪಿಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿ ಕಾಪಾಡಿಲ್ಲ. ಬೆಳಗಾವಿ ಮತ್ತು ಹಾವೇರಿ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಯಿತು. ಈ ಘಟನೆ ತಡೆಯುವಲ್ಲಿ ಪೊಲೀಸರು ವಿಫಲವಾಗಿದ್ದಾರೆ. ಮಹಿಳೆಯರಿಗೆ ರಕ್ಷಣೆ ನೀಡಲು ಈ ಸರ್ಕಾರಕ್ಕೆ ಸಾಧ್ಯವಾಗಿಲ್ಲ ಎಂದು ದೂರಿದರು.  

ದೇಶದ್ರೋಹಿ ಚಟುವಟಿಕೆಗಳು ಹೆಚ್ಚಾಗಿವೆ. ವಿಧಾನಸೌದದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದರು. ಬೆಂಗಳೂರಿನಲ್ಲಿ ಬಾಂಬ್‌ ಸ್ಪೋಟ ಸಂಭವಿಸಿತು. ಇದುವರೆಗೂ ಆರೋಪಿಗಳನ್ನು ಬಂಧಿಸಿಲ್ಲ. ಇದರಿಂದ ರಾಜ್ಯದ ಜನ ಬೇಸತ್ತಿದ್ದಾರೆ ಎಂದರು.

ವಿಧಾನ ಪರಿಷತ್‌ ಮಾಜಿ ಸದಸ್ಯ ಅರುಣ ಶಹಾಪೂರ, ಮುಖಂಡರಾದ ಸುರೇಶ ಬಿರಾದಾರ, ಚಂದ್ರಶೇಖರ ಕವಟಗಿ, ವಿಜಯ್‌ ಜೋಶಿ ಇದ್ದರು.

ಬಿಜೆಪಿ ಸರ್ಕಾರದ ಜನಪರ ಕಾರ್ಯಗಳು ಕಾಂಗ್ರೆಸ್‌ ಸರ್ಕಾರದ ವೈಫಲ್ಯಗಳ ಕುರಿತು ಜನರಿಗೆ ತಿಳಿಸಲು ವಿಧಾನ ಪರಿಷತ್‌ ಸದಸ್ಯರು 10 ತಂಡವಾಗಿ ರಾಜ್ಯದಾದ್ಯಂತ ಪ್ರವಾಸ ಮಾಡುತ್ತಿದ್ದೇವೆ
–ಹನುಮಂತ ನಿರಾಣಿವಿಧಾನ ಪರಿಷತ್‌ ಸದಸ್ಯ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.