ವಿಜಯಪುರ: ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯವಾಗಿರುವ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಯನ್ನು ಮುಚ್ಚಲು ರಾಜ್ಯ ಸರ್ಕಾರ ಹುನ್ನಾರ ನಡೆಸಿದೆ ಎಂದು ವಕೀಲ ಶ್ರೀನಾಥ ಪೂಜಾರಿ ಆರೋಪಿಸಿದರು.
ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಪನ್ಮೂಲದ ಕೊರತೆಯಿಂದ ಮಹಿಳಾ ವಿಶ್ವವಿದ್ಯಾಲಯವನ್ನು ಮುಚ್ಚಲು ರಾಜ್ಯ ಸರ್ಕಾರ ಮುಂದಾಗಿರುವುದಾಗಿ ತಿಳಿದುಬಂದಿದೆ. ಈ ಸಂಬಂಧ ಉನ್ನತ ಶಿಕ್ಷಣ ಸಚಿವರ ನೇತೃತ್ವದಲ್ಲಿ ಸಭೆಗಳು ಈಗಾಗಲೇ ನಡೆದಿವೆ ಎಂದು ಹೇಳಿದರು.
ಮಹಿಳೆಯರ ಉನ್ನತ ಶಿಕ್ಷಣಕ್ಕೆ ಮೀಸಲಾಗಿರುವ ಈ ವಿಶ್ವವಿದ್ಯಾಲಯವನ್ನು ಮುಚ್ಚುವುದು ಇಲ್ಲವೇ, ಸಾಮಾನ್ಯ ವಿಶ್ವವಿದ್ಯಾಲಯವೆಂದು ಪರಿಗಣಿಸಿ, ಪುರುಷರಿಗೂ ಅವಕಾಶ ಕಲ್ಪಿಸಲು ಸರ್ಕಾರ ಯೋಜಿಸಿರುವುದಾಗಿ ವಿಶ್ವವಿದ್ಯಾಲಯದ ಉನ್ನತ ಮೂಲಗಳಿಂದ ಎಂದು ತಿಳಿದುಬಂದಿದೆ. ಈ ಮೂಲಕ ಮನುವಾದಿ ಬಿಜೆಪಿ ಸರ್ಕಾರ ಮಹಿಳಾ ವಿರೋಧಿ ನೀತಿ ಅನುಸರಿಸುತ್ತಿದೆ. ಮಹಿಳೆಯರು ಉನ್ನತ ಶಿಕ್ಷಣದಿಂದ ವಂಚಿತರಾಗುವಂತೆ ಮಾಡಲು ತಂತ್ರರೂಪಿಸಿದೆ ಎಂದು ದೂರಿದರು.
ರಾಜ್ಯ ಸರ್ಕಾರ ಈ ಅವೈಜ್ಞಾನಿಕ ಆಲೋಚನೆಯನ್ನು ಕೈಬಿಡಬೇಕು. ಅಗತ್ಯ ಎನಿಸಿದರೆ ವಿಜಯಪುರದಲ್ಲೇ ಮತ್ತೊಂದು ಹೊಸ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕು ಎಂದು ಸಲಹೆ ನೀಡಿದರು.
ಜಿಲ್ಲೆಯ ಶಿಕ್ಷಕರ ಕ್ಷೇತ್ರ ಮತ್ತು ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿರುವ ವಿಧಾನ ಪರಿಷತ್ ಸದಸ್ಯರು ಈ ಹುನ್ನಾರದಲ್ಲಿ ಪಾಲ್ಗೊಂಡಿದ್ದಾರೆ ಎಂದು ಆರೋಪಿಸಿದರು.
ಸರ್ಕಾರ ಒಂದು ವೇಳೆ ಮಹಿಳಾ ವಿಶ್ವವಿದ್ಯಾಲಯವನ್ನು ಮುಚ್ಚಲು ಮುಂದಾದರೆ ಮಹಿಳಾ ಸಂಘಟನೆಗಳು, ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಹೋರಾಟ ರೂಪಿಸಲಾಗುವುದು ಎಂದರು.
ದಲಿತ ವಿದ್ಯಾರ್ಥಿ ಪರಿಷತ್‌ನ ಪದಾಧಿಕಾರಿಗಳಾದ ಬಾಲಾಜಿ ಕಾಂಬಳೆ, ಅಕ್ಷಯ್‌ಕುಮಾರ್ ಅಜಮನಿ, ಆನಂದ ಮುದೂರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.