ವಿಜಯಪುರ: ಬಬಲೇಶ್ವರ ಕ್ಷೇತ್ರದಲ್ಲಿ ವಿದ್ಯುತ್ ಸಮಸ್ಯೆ ಉಲ್ಬಣಗೊಂಡಿದ್ದು, ನಿರ್ಲಕ್ಷ್ಯ ವಹಿಸದೇ ತಕ್ಷಣ ಪರಿಹಾರ ಕಂಡುಕೊಳ್ಳಬೇಕು ಎಂದು ಶಾಸಕ ಎಂ.ಬಿ.ಪಾಟೀಲ ಅವರು ಹೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.
ನಗರದಲ್ಲಿ ಮಂಗಳವಾರ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮಗಳಲ್ಲಿ ಸಮರ್ಪಕ ವಿದ್ಯುತ್ ಪೂರೈಕೆ ಆಗುತ್ತಿಲ್ಲ. ರೈತರಿಗೆ ಬೇಕಾಗಿರುವ ಟ್ರಾನ್ಸ್ ಫಾರ್ಮ್‍ಗಳನ್ನು ವಿತರಿಸಲು ವಿಳಂಬವಾಗುತ್ತಿದೆ ಎಂಬ ದೂರು ಬಂದಿದ್ದು, ಹೆಸ್ಕಾಂ ಅಧಿಕಾರಿಗಳು ಗ್ರಾಮಸ್ಥರ ಸಮಸ್ಯೆ ಅರಿಯದೆ ಬೇಜವಾಬ್ದಾರಿಯಿಂದ ವರ್ತಿಸಿದರೆ ಅಂತವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ವಿಜಯಪುರ, ಬಬಲೇಶ್ವರ ಹಾಗೂ ತಿಕೋಟಾ ಈ ಮೂರು ತಾಲ್ಲೂಕುಗಳ ರೈತರಿಗೆ ಅಗತ್ಯ ಪ್ರಮಾಣದಲ್ಲಿ ಬಿತ್ತನೆ ಬೀಜ ವಿತರಿಸಬೇಕು ಎಂದು ಹೇಳಿದರು.
ಪೊಲೀಸರು ಕೋವಿಡ್ ರೋಗಿಗಳಿರುವ ಪ್ರದೇಶಗಳಲ್ಲಿ ಹೆಚ್ಚಿನ ಜಾಗೃತೆ ವಹಿಸಬೇಕು ಎಂದರು.
ಕೆರೆ, ಕಾಲುವೆಗಳಲ್ಲಿನ ನೀರು ದುರ್ಬಳಕೆಯಾಗುವುದನ್ನು ನಿಲ್ಲಿಸಲು ಸೂಕ್ತ ಕ್ರಮಕೈಗೊಳ್ಳಬೇಕು. ಕೆರೆಯ ಬದಿಯಲ್ಲಿ ಖಾಲಿ ಜಾಗಗಳನ್ನು ಗುರುತಿಸಿ ಸಸಿ ನೆಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಶಿರಬೂರ ಮತ್ತು ಚಿಕ್ಕಗಲಗಲಿ ಪುನರ್ವಸತಿ ಕೇಂದ್ರಗಳಲ್ಲಿ ಯುಜಿಡಿ ಮಾದರಿಯಲ್ಲಿ ಡ್ರೇನ್ ತಯಾರಿಸಬೇಕು. ಮೀನುಗಾರರಿಗೆ ಸರ್ಕಾರದ ಸೌಲಭ್ಯ ದೊರಕಿಸಿಕೊಡಬೇಕು ಎಂದರು.
ಜಿಲ್ಲೆಯಲ್ಲಿ ಕೆರೆಗಳು ತುಂಬಿದ್ದು ಮೀನು ಸಾಕಾಣಿಕೆಗೆ ಹೆಚ್ಚಿನ ಒತ್ತು ನೀಡಿ ಎಂದು ಸಲಹೆ ನೀಡಿದರು.
ವಿಧಾನ ಪರಿಷತ್ ಸದಸ್ಯ ಸುನೀಲ ಗೌಡ ಪಾಟೀಲ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಎನ್.ಎಸ್.ಭೂಸಗೊಂಡ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಚ್.ಬಿ.ಪಡಸಲಗಿ, ಡಿಎಸ್‌ಪಿ ಲಕ್ಷ್ಮೀನಾರಾಯಣ, ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಶ್ರೀಶೈಲ ಎಸ್.ಗಂಗನಳ್ಳಿ, ಹೆಸ್ಕಾಂ ಎಇಇ ಮಿಲಿಂದ ಜೀರ, ಕೃಷ್ಣಾ ಮೇಲ್ದಂಡೆ ಯೋಜನೆ ಪುನರ್ವಸತಿ ಕೇಂದ್ರ ಕೊಲಾರ ಕಾರ್ಯನಿರ್ವಾಹಕ ಎಂಜಿನಿಯರ್ ಎಸ್.ಟಿ.ಬಬಲೇಶ್ವರ, ಬಬಲೇಶ್ವರ ಕೃಷಿ ಅಧಿಕಾರಿ ಮಲ್ಲಿಕಾರ್ಜುನ ಪೂಜಾರಿ, ಹಿಂದುಳಿದ ವರ್ಗ ಇಲಾಖೆ ಅಧಿಕಾರಿ ಎಸ್.ಎ.ಜಮಾದಾರ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎಸ್.ಹತ್ತಳ್ಳಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.