ADVERTISEMENT

ವಿಜಯಪುರ: ಸಾರ್ವಜನಿಕ ಗಣೇಶೋತ್ಸವಕ್ಕೆ ಇಲ್ಲ ಅವಕಾಶ

ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್‌ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2020, 12:25 IST
Last Updated 7 ಆಗಸ್ಟ್ 2020, 12:25 IST
ವಿಜಯಪುರ ಗಜಾನನ ಉತ್ಸವ ಮಹಾಮಂಡಳದಿಂದ, ಗಣೇಶೋತ್ಸವ ಆಚರಿಸಲು ಅವಕಾಶ ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು
ವಿಜಯಪುರ ಗಜಾನನ ಉತ್ಸವ ಮಹಾಮಂಡಳದಿಂದ, ಗಣೇಶೋತ್ಸವ ಆಚರಿಸಲು ಅವಕಾಶ ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು   

ವಿಜಯಪುರ: ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ನಗರ ಸೇರಿದಂತೆ ಜಿಲ್ಲೆಯಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್‌ ತಿಳಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಶುಕ್ರವಾರ ಮಾತನಾಡಿದ ಅವರು, ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್‌ ವ್ಯಾಪಕವಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ, ಮೆರವಣಿಗೆಗೆ ಅವಕಾಶ ನೀಡುವುದು ಅಪಾಯಕ್ಕೆ ಆಹ್ವಾನ ನೀಡಿದಂತೆ ಎಂದು ಅವರು ಹೇಳಿದರು.

ಸಾರ್ವಜನಿಕರು ತಮ್ಮ ಮನೆಗಳಲ್ಲಿ ಗಣೇಶನ ಚಿಕ್ಕ, ಚಿಕ್ಕ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿ ವಿಸರ್ಜಿಸಲು ಅವಕಾಶವಿದೆ. ಇದಕ್ಕೆ ಯಾವುದೇ ಅಭ್ಯಂತರವಿಲ್ಲ ಎಂದು ತಿಳಿಸಿದರು.

ADVERTISEMENT

ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಜನರು ತಮ್ಮ ಮನೆಗಳಲ್ಲಿ ಪ್ರತಿಷ್ಠಾಪಿಸುವ ಗಣೇಶನನ್ನು ವಿಸರ್ಜಿಸಲು ಅನುಕೂಲವಾಗುವಂತೆ ಸ್ಥಳೀಯ ಆಡಳಿತಗಳಿಂದ ಕೃತಕ ಟ್ಯಾಂಕ್‌ ಒದಗಿಸಲು ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

ಈ ಸಂಬಂಧ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದು ತಿಳಿಸಿದರು.

ಅವಕಾಶ ನೀಡಲು ಮನವಿ

ಸರ್ಕಾರದ ಕೋವಿಡ್‌ ನಿಯಮಾನುಸಾರ ಗಣೇಶೋತ್ಸವ ಆಚರಿಸಲು ಜಿಲ್ಲಾಡಳಿತ ಅವಕಾಶ ಮಾಡಿಕೊಡಬೇಕು ಎಂದುಗಜಾನನ ಉತ್ಸವ ಮಹಾ ಮಂಡಳ ಜಿಲ್ಲಾಡಳಿತಕ್ಕೆ ಮನವಿ ಮಾಡಿದೆ.

ಈ ಸಂಬಂಧ ಶುಕ್ರವಾರ ಜಿಲ್ಲಾಧಿಕಾರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮಹಾ ಮಂಡಳಿದ ಪದಾಧಿಕಾರಿಗಳು, ಧಾರ್ಮಿಕ ವಿಧಿ, ವಿಧಾನಗಳ ಪ್ರಕಾರ ಗಣೇಶ ಉತ್ಸವ ಆಚರಣೆಗೆ ಅವಕಾಶ ನೀಡಬೇಕು ಎಂದರು.

ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಮಾತನಾಡಿ, ಕೋವಿಡ್ 19 ಇರುವ ಕಾರಣ ಉತ್ಸವಕ್ಕೆ ಸರ್ಕಾರ ಯಾವುದೇ ಮಾರ್ಗಸೂಚಿ ಹಾಗೂ ಸೂಚನೆಗಳನ್ನು ನೀಡಿದರೂ ಪಾಲಿಸಲಾಗುವುದು. ಪರಸ್ಪರ ಅಂತರ, ಮಾಸ್ಕ್‌, ಸ್ಯಾನಿಟೈಜರ್ ಮತ್ತು ಸರ್ಕಾರದ ಯಾವುದೇ ಸಲಹೆಗಳನ್ನು ಪಾಲಿಸಲು ಬದ್ಧರಾಗಿದ್ದೇವೆ ಎಂದು ಹೇಳಿದರು.

ಮನೆಯಲ್ಲಿಯೇ ಪ್ರತಿಷ್ಠಾಪಿಸಲು ಗಣೇಶ ಮೂರ್ತಿಗಳನ್ನು ಕಲ್ಪಿಸಿಕೊಂಡು, ಮನೆಯಲ್ಲಿಯೇ ಪ್ರತಿಷ್ಠಾಪಿಸಿ ಗಣೇಶ ವಿಸರ್ಜನೆಗೆ ಕೃತಕ ಹೊಂಡ ನಿರ್ಮಿಸಿಕೊಂಡು ಸರಳ ರೀತಿಯಾಗಿ ಗಣೇಶ ಉತ್ಸವ ಆಚರಣೆ ಮಾಡಲು ಅನುವು ಮಾಡಿಕೊಡಬೇಕು ಎಂದರು.

ಶ್ರೀ ಗಜಾನನ ಉತ್ಸವ ಮಹಾ ಮಂಡಳ ಶಿವಾನಂದ ಮಾನಕರ, ಭೀಮಾಶಂಕರ ಹದನೂರ, ಗೋಪಾಲ ಕಾಂಬಳೆ, ಅಲ್ತಾಫ್‌ ಇಟಗಿ, ಅಪ್ಪು ಸಜ್ಜನ, ಪ್ರಭಾಕರ ಭೊಸಲೆ, ಮಹಾಮಂಡಳ ಮಾಜಿ ಅಧ್ಯಕ್ಷ ಮಹೇಶ ಜಾಧವ, ಈರಣ್ಣ ಪಟ್ಟಣಶೆಟ್ಟಿ, ವಿಜು ಕೊಹಳ್ಳಿ, ಅಂಬಾ ವಿಭೂತಿ, ಶಿವಾಜಿ ಪಾಟೀಲ, ರವಿ ಮುಕರ್ತಿಹಾಳ, ಸತೀಶ ಪಾಟೀಲ, ವಿಜಯ ಜೋಶಿ ಉಪಸ್ಥಿತರಿದ್ದರು.

ವಿವಿ ಮೈದಾನದಲ್ಲಿ ಧ್ವಜಾರೋಹಣ

ವಿಜಯಪುರ ನಗರದ ಡಾ.ಬಿ.ಆರ್‌.ಅಂಬೇಡ್ಕರ್ ಮೈದಾನದಲ್ಲಿ ಸಿಂಥೆಟಿಕ್‌ ಟ್ರ್ಯಾಕ್‌ ನಿರ್ಮಾಣ ಕಾರ್ಯ ನಡೆದಿರುವುದರಿಂದ ಆಗಸ್ಟ್‌ 15ರಂದು ಧ್ವಜಾರೋಹಣ ಕಾರ್ಯಕ್ರಮ ಆಯೋಜಿಸಲು ಸಾಧ್ಯವಾಗುತ್ತಿಲ್ಲ. ಅಲ್ಲದೇ ಮುಂದೆಯೂ ಈ ಸಿಂಥೆಟಿಕ್‌ ಟ್ರ್ಯಾಕ್‌ನಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲು ಸಾಧ್ಯವಾಗುತ್ತಿಲ್ಲ. ಈ ಕಾರಣಕ್ಕೆ ಈ ವರ್ಷ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಆವರಣದಲ್ಲಿ ಧ್ವಜಾರೋಹಣ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.

ವಿಶ್ವವಿದ್ಯಾಲಯದ ಮೈದಾನದಲ್ಲಿ ಧ್ವಜಾರೋಹಣ ಕಾರ್ಯಕ್ರಮ ಆಯೋಜನೆ ಸಂಬಂಧ ಈಗಾಗಲೇ ಕುಲಪತಿ ಅವರೊಂದಿಗೆ ಚರ್ಚಿಸಲಾಗಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.