ADVERTISEMENT

ಸಿಂದಗಿ | ಬಸ್ ಪಾಸ್ ವಿತರಣೆ, ಬಸ್‌ಗಳ ಸಂಖ್ಯೆ ಹೆಚ್ಚಳಕ್ಕೆ ಆಗ್ರಹ

ಸಿಂದಗಿಯಲ್ಲಿ ಎಬಿವಿಪಿಯಿಂದ ರಸ್ತೆ ತಡೆದು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 26 ಜೂನ್ 2024, 14:47 IST
Last Updated 26 ಜೂನ್ 2024, 14:47 IST
ಬಸ್‌ಪಾಸ್ ವಿತರಣೆ ಹಾಗೂ ಸಾರಿಗೆ ಬಸ್‌ಗಳ ಸಂಖ್ಯೆ ಹೆಚ್ಚಳಕ್ಕೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತಾಲ್ಲೂಕು ಶಾಖೆ ನೇತೃತ್ವದಲ್ಲಿ ಕಾರ್ಯಕರ್ತರು ಸಿಂದಗಿಯ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಗ್ರೇಡ್-2 ಇಂದಿರಾಬಾಯಿ ಬಳಗಾನೂರ ಅವರಿಗೆ ಮನವಿ ಸಲ್ಲಿಸಿದರು
ಬಸ್‌ಪಾಸ್ ವಿತರಣೆ ಹಾಗೂ ಸಾರಿಗೆ ಬಸ್‌ಗಳ ಸಂಖ್ಯೆ ಹೆಚ್ಚಳಕ್ಕೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತಾಲ್ಲೂಕು ಶಾಖೆ ನೇತೃತ್ವದಲ್ಲಿ ಕಾರ್ಯಕರ್ತರು ಸಿಂದಗಿಯ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಗ್ರೇಡ್-2 ಇಂದಿರಾಬಾಯಿ ಬಳಗಾನೂರ ಅವರಿಗೆ ಮನವಿ ಸಲ್ಲಿಸಿದರು    

ಸಿಂದಗಿ: ವಿದ್ಯಾರ್ಥಿಗಳ ಶೈಕ್ಷಣಿಕ ವೇಳಾಪಟ್ಟಿಗೆ ಅನುಗುಣವಾಗಿ ಬಸ್ ಪಾಸ್ ವಿತರಣೆ ಹಾಗೂ ಬಸ್‌ಗಳ ಸಂಖ್ಯೆ ಹೆಚ್ಚಳ ಮಾಡುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತಾಲ್ಲೂಕು ಶಾಖೆ ನೇತೃತ್ವದಲ್ಲಿ ಕಾರ್ಯಕರ್ತರು ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಎಬಿವಿಪಿ ನಗರ ಕಾರ್ಯದರ್ಶಿ ವಿಶಾಲ ನಾಯ್ಕೋಡಿ ಮಾತನಾಡಿ, ವಿದ್ಯಾರ್ಥಿಗಳ ತರಗತಿಗಳು ಪ್ರಾರಂಭವಾಗಿದ್ದರೂ ಸರಿಯಾದ ಸಮಯಕ್ಕೆ ಬಸ್ ಪಾಸ್‌ ವಿತರಣೆ ಮಾಡದೇ ಇರುವುದರಿಂದ ಬಡ ವಿದ್ಯಾರ್ಥಿಗಳು ಹಣ ಕೊಟ್ಟು ಶಾಲಾ-ಕಾಲೇಜುಗಳಿಗೆ ಬರಬೇಕಾಗಿದೆ. ಬಸ್ ಪಾಸ್ ಗೆ ಅರ್ಜಿ ಸಲ್ಲಿಸಿದ ನಂತರ ವಾರಗಳ ಕಾಲ ವಿದ್ಯಾರ್ಥಿಗಳು ಪಾಸ್ ಪಡೆಯಲು ಕಾಯುವ ಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಬಡ ವಿದ್ಯಾರ್ಥಿಗಳು ಬಸ್ ಪಾಸ್ ಸಿಗುವ ತನಕ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ರಾಜ್ಯದಲ್ಲಿ ವಿಶ್ವವಿದ್ಯಾಲಯಗಳ ಶೈಕ್ಷಣಿಕ ವೇಳಾಪಟ್ಟಿ ಬಹಳಷ್ಟು ವ್ಯತ್ಯಾಸವಿದೆ. ಹೀಗಾಗಿ ವಿಶ್ವವಿದ್ಯಾಲಯಗಳ ಶೈಕ್ಷಣಿಕ ವೇಳಾ ಪಟ್ಟಿಗೆ ಅನುಗುಣವಾಗಿ ಪಾಸ್ ವಿತರಿಸಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಮಾಡಿರುವುದರಿಂದ ಮಹಿಳೆಯರು ಹೆಚ್ಚು ಪ್ರಯಾಣ ಮಾಡುತ್ತಿದ್ದಾರೆ. ಬಸ್ ಗಳ ಸಂಖ್ಯೆ ಹೆಚ್ಚಿಸದೇ ಇರುವುದರಿಂದ ವಿದ್ಯಾರ್ಥಿಗಳಿಗೆ ಬಸ್‌ಗಳಲ್ಲಿ ಸಂಚರಿಸಲು ತೊಂದರೆ ಆಗುತ್ತಿದೆ. ವಿದ್ಯಾರ್ಥಿಗಳು ಬಸ್ಸಿನ ಬಾಗಿಲಲ್ಲಿ ನಿಂತು ಅಪಾಯದಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಕೂಡಲೇ ಸರ್ಕಾರ ಬಸ್ ಗಳ ಸಂಖ್ಯೆಯನ್ನು ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದರು.

ADVERTISEMENT

ಯಾವ ಹಳ್ಳಿಗಳಿಗೆ ಬಸ್ ಗಳ ಕೊರತೆ ಇದೆ ಅಲ್ಲಿಗೆ ಸಮರ್ಪಕವಾದ ಬಸ್ ಗಳ ವ್ಯವಸ್ಥೆಯನ್ನು ಮಾಡಿ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಸಮಯಕ್ಕೆ ಸರಿಯಾಗಿ ಹೋಗುವಂತಾಗಬೇಕು ಎಂದರು.

ಪ್ರತಿಭಟನೆಕಾರರು ತಹಶೀಲ್ದಾರ್‌ ಗ್ರೇಡ್‌–2 ಇಂದಿರಾಬಾಯಿ ಬಳಗಾನೂರ ಅವರಿಗೆ ಮನವಿ ಸಲ್ಲಿಸಿದರು. ಅನೀಲ ಕುಂಬಾರ, ಭೀಮಾಶಂಕರ ಹಿರೇಮಠ, ಪ್ರಕಾಶ ಅಗಸರ, ಸಾಗರ ರೆಬಿನಾಳ, ರವಿ ಹಾಗೂ ವಿದ್ಯಾರ್ಥಿನಿಯರಾದ ಪೂಜಾ ರಾಠೋಡ, ಭುವನೇಶ್ವರಿ, ತುಳಜಾಭವಾನಿ ಶೈಲಾ ಇದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.