ADVERTISEMENT

ಗಣರಾಜ್ಯೋತ್ಸವ | ಪ್ಲಾಸ್ಟಿಕ್ ಧ್ವಜ ಮಾರಾಟಕ್ಕೆ ತಡೆ: ಜಿಲ್ಲಾಧಿಕಾರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 11 ಜನವರಿ 2024, 15:52 IST
Last Updated 11 ಜನವರಿ 2024, 15:52 IST
ವಿಜಯಪುರ ನಗರದಲ್ಲಿ ಗುರುವಾರ ನಡೆದ ಗಣರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಿದ್ಧತಾ ಸಭೆಯ ಜಿಲ್ಲಾಧಿಕಾರಿ ಟಿ.ಭೂಬಾಲನ್ ಮಾತನಾಡಿದರು
ವಿಜಯಪುರ ನಗರದಲ್ಲಿ ಗುರುವಾರ ನಡೆದ ಗಣರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಿದ್ಧತಾ ಸಭೆಯ ಜಿಲ್ಲಾಧಿಕಾರಿ ಟಿ.ಭೂಬಾಲನ್ ಮಾತನಾಡಿದರು   

ವಿಜಯಪುರ: ಜ.26 ರಂದು ಆಚರಿಸಲಾಗುವ ಗಣರಾಜ್ಯೋತ್ಸವದಂದು ಪ್ಲಾಸ್ಟಿಕ್ ಧ್ವಜ ಮಾರಾಟವಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ  ಗಣರಾಜ್ಯೋತ್ಸವ ಆಚರಣೆಯ ಕುರಿತು ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜ.26 ರಂದು ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ತಿಳಿಸಿದರು.

ADVERTISEMENT

ಗಣರಾಜ್ಯೋತ್ಸವವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಯಾವುದೇ ಗೊಂದಲ ಮಾಡಿಕೊಳ್ಳದೇ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಲು ಸೂಚಿಸಿದರು.

ಅಧಿಕಾರಿಗಳು ತಮಗೆ ವಹಿಸಿದ ಎಲ್ಲ ಕಾರ್ಯಗಳನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು. ಜನಪ್ರತಿನಿಧಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲು ಕ್ರಮವಹಿಸಬೇಕು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆಗೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಂದು ಸಂಜೆ ಕಂದಗಲ್ ಹನುಮಂತರಾಯ ರಂಗ ಮಂದಿರದಲ್ಲಿ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಲಾಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಹೆಚ್ಚುವರಿ ಜಿಲ್ಲಾಧಿಕಾರಿ ಮಹಾದೇವ ಮುರಗಿ, ವಿಜಯಪುರ ಉಪ ವಿಭಾಗಾಧಿಕಾರಿ ಬಸವಣೆಪ್ಪ ಕಲಶೆಟ್ಟಿ, ಮಹಾನಗರ ಪಾಲಿಕೆ ಆಯುಕ್ತ ಬದ್ರುದ್ದಿನ ಸೌದಾಗರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೆ.ಕೆ.ಚವ್ಹಾಣ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಪುಂಡಲಿಕ ಮಾನವರ ಸೇರಿದಂತೆ ಅನೇಕರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.