ವಿಜಯಪುರ: ಕನಿಷ್ಠ ಬೆಂಬಲ ಬೆಲೆ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯಲ್ಲಿ ಪ್ರತಿ ಕ್ವಿಂಟಲ್ ಸೂರ್ಯಕಾಂತಿಗೆ ₹7280 ಹಾಗೂ ಹೆಸರುಕಾಳಿಗೆ ₹8682 ಬೆಂಬಲ ಬೆಲೆ ನಿಗದಿ ಮಾಡಿ, ಖರೀದಿಸಲು ನಿರ್ಧರಿಸಲಾಗಿದೆ.
ಕನಿಷ್ಠ ಬೆಂಬಲೆ ಬೆಲೆ ಜಿಲ್ಲಾ ಕಾರ್ಯಪಡೆ ಸಮಿತಿ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಟಿ.ಭೂಭಾಲನ್ ಅವರ ಅಧ್ಯಕ್ಷತೆಯಲ್ಲಿ ಆ.26ರಂದು ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಂಡಿದ್ದು, ಜಿಲ್ಲೆಯಲ್ಲಿ 2024-25ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ 1745 ಹೆಕ್ಟೇರ್ ಕ್ಷೇತ್ರದಲ್ಲಿ ಸೂರ್ಯಕಾಂತಿ ಬಿತ್ತನೆಯಾಗಿದ್ದು, ಅಂದಾಜು 26175 ಕ್ವಿಂಟಲ್ ಇಳುವರಿ ಅಂದಾಜಿಸಲಾಗಿದೆ.
ಪ್ರಸ್ತುತ ಮಾರುಕಟ್ಟೆಯಲ್ಲಿ ಸೂರ್ಯಕಾಂತಿ ₹4400 ರಿಂದ ₹ 4800 ವರೆಗಿನ ದರದಲ್ಲಿ ಮಾರಾಟವಾಗುತ್ತಿದ್ದು, ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್‍ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಪ್ರತಿ ಕ್ವಿಂಟಲ್ ₹ 7280 ರೂ.ಗೆ ಖರೀದಿಸಲು ತೀರ್ಮಾನಿಸಲಾಗಿದೆ.
ನ್ಯಾಫೆಡ್ ಸಂಸ್ಥೆಯನ್ನು ಖರೀದಿ ಸಂಸ್ಥೆಯನ್ನಾಗಿ ಹಾಗೂ ಕರ್ನಾಟಕ ಸಹಕಾರಿ ಎಣ್ಣೆಬೀಜ ಬೆಳೆಗಾರರ ಮಹಾಮಂಡಳವನ್ನು ರಾಜ್ಯದ ವತಿಯಿಂದ ಖರಿದಿ ಸಂಸ್ಥೆಗಳನ್ನಾಗಿ ನೇಮಿಸಲಾಗಿದೆ. ಜಿಲ್ಲೆಯಲ್ಲಿ ಕೆಓಎಫ್ ಸಂಸ್ಥೆಯ ಎಣ್ಣೆಬೀಜ ಬೆಳೆಗಾರರ ಸಹಕಾರಿ ಸಂಘಗಳನ್ನು ಖರೀದಿ ಕೇಂದ್ರಗಳೆಂದು ಪರಿಗಣಿಸಿ ರೈತರ ನೋಂದಣಿಯೊಂದಿಗೆ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಜಿಲ್ಲೆಯ ಬಬಲೇಶ್ವರ, ಸವನಹಳ್ಳಿ, ಬೆಳ್ಳುಬ್ಬಿ, ತಾಜಪುರ, ತಂಗಡಗಿ, ಚಡಚಣ, ಹಲಸಂಗಿ, ಸಿಂದಗಿ ಹಾಗೂ ಬಸವನಬಾಗೇವಾಡಿ ಸೇರಿದಂತೆ ಒಟ್ಟು 9 ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ.
ಪ್ರತಿ ರೈತರಿಂದ ಪ್ರತಿ ಎಕರೆಗೆ ಗರಿಷ್ಠ 3 ಕ್ವಿಂಟಲ್‍ನಂತೆ ಹಾಗೂ ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಲ್ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿಸಲು ತೀರ್ಮಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಾಖಾ ವ್ಯವಸ್ಥಾಪಕರು ಕೆಓಎಫ್ ವಿಜಯಪುರ ಮೊ: 9900553054 ಸಂಖ್ಯೆಗೆ ಸಂಪರ್ಕಿಸಲು ತಿಳಿಸಲಾಗಿದೆ.
ಹೆಸರುಕಾಳು: ಜಿಲ್ಲೆಯಲ್ಲಿ 706 ಹೆಕ್ಟೇರ್ ಕ್ಷೇತ್ರದಲ್ಲಿ ಹೆಸರುಕಾಳು ಬಿತ್ತನೆಯಾಗಿದ್ದು, ಅಂದಾಜು 8805 ಕ್ವಿಂಟಲ್ ಇಳುವರಿ ಅಂದಾಜಿಸಲಾಗಿದೆ. ಪ್ರಸ್ತುತ ಮಾರುಕಟ್ಟೆಗೆ ಆವಕವಾಗದೇ ಸಮೀಪದ ಮಾರುಕಟ್ಟೆಯಲ್ಲಿ ಹೆಸರುಕಾಳು ಕನಿಷ್ಠ ₹ 6495 ರಿಂದ ಗರಿಷ್ಠ ₹ 7851 ಹಾಗೂ ಸರಾಸರಿ ₹ 7002 ಪ್ರತಿ ಕ್ವಿಂಟಾಲ್‍ಗೆ ಮಾರಾಟವಾಗುತ್ತಿದ್ದು, ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್‍ಎಕ್ಯೂ ಗುಣಮಟ್ಟದ ಹೆಸರುಕಾಳು ಪ್ರತಿ ಕ್ವಿಂಟಲ್ ₹ 8682ಗೆ ಖರೀದಿಸಲು ತೀರ್ಮಾನಿಸಿ, ಜಿಲ್ಲೆಯಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘಗಳು ಟಿಎಪಿಸಿಎಂಎಸ್ ಸಂಸ್ಥೆಗಳನ್ನು ಖರೀದಿ ಕೇಂದ್ರಗಳೆಂದು ಪರಿಗಣಿಸಿ ಪರಿಗಣಿಸಿ ರೈತರ ನೋಂದಣಿಯೊಂದಿಗೆ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ವಿಜಯಪುರ, ಬಸವನಬಾಗೇವಾಡಿ, ಮುದ್ದೇಬಿಹಾಳ, ಸಿಂದಗಿ ಹಾಗೂ ಇಂಡಿ ಖರೀದಿ ಕೇಂದ್ರಗಳಲ್ಲಿ ಟಿಎಪಿಸಿಎಂಎಸ್ ಏಜೆನ್ಸಿ ಮೂಲಕ ಖರೀದಿಸಲು ನಿರ್ಣಯಿಸಲಾಯಿತು. ಪ್ರತಿ ರೈತರಿಂದ ಪ್ರತಿ ಎಕರೆಗೆ ಗರಿಷ್ಠ 2 ಕ್ವಿಂಟಾಲ್‍ನಂತೆ ಹಾಗೂ ಪ್ರತಿ ರೈತರಿಂದ ಗರಿಷ್ಠ 10 ಕ್ವಿಂಟಾಲ್ ಎಪ್‍ಎಕ್ಯೂ ಗುಣಮಟ್ಟದ ಹೆಸರುಕಾಳು ಖರೀದಿಸಲು ನಿರ್ಣಯಿಸಿ, ಹೆಚ್ಚಿನ ಮಾಹಿತಿಗಾಗಿ ಶಾಖಾ ವ್ಯವಸ್ಥಾಪಕರು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ (ಮಾರ್ಕಫೆಡ್) ಎಪಿಎಂಸಿ ಯಾರ್ಡ, ವಿಜಯಪುರ ಮೊ: 7892095176 ಸಂಖ್ಯೆಗೆ ಸಂಪರ್ಕಿಸಲು ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.