ವಿಜಯಪುರ: ಬಾಲ್ಯವಿವಾಹ ತಡೆಗೆ ಅಧಿಕಾರಿಗಳು ಇನ್ನಷ್ಟು ಚುರುಕಾಗಿ ಕಾರ್ಯನಿರ್ವಹಿಸಬೇಕು ಎಂದು ತಹಶೀಲ್ದಾರ್ ಸಿದ್ಧರಾಯ ಬೋಸಗಿ ಹೇಳಿದರು.
ನಗರದ ಮಿನಿವಿಧಾನಸೌಧದ ತಹಶೀಲ್ದಾರ್ ಕಚೇರಿಯಲ್ಲಿ 2021-22 ನೇ ಸಾಲಿನ 2 ಮತ್ತು 3 ನೇ ತ್ರೈಮಾಸಿಕದ ತಾಲ್ಲೂಕು ಮಟ್ಟದ ಸಮನ್ವಯ ಸಮಿತಿ ಸಭೆಯ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
ಬಾಲ್ಯವಿವಾಹವು ಒಂದು ಗಂಭೀರ ಸಾಮಾಜಿಕ ಸಮಸ್ಯೆಯಾಗಿದ್ದು, ಇದು ಒಂದು ಮಗುವಿನ ಜೀವನದ ಪ್ರಶ್ನೆಯಾಗಿರುವುದರಿಂದ ಇದರ ನಿಯಂತ್ರಣಕ್ಕೆ ಸಾಮಾಜಿಕ ಬದ್ಧತೆಯು ಅಗತ್ಯವಾಗಿದೆ ಎಂದು ಹೇಳಿದರು.
ಕೌಟುಂಬಿಕ ದೌರ್ಜನ್ಯ ಪ್ರಕರಣಗಳನ್ನೂ ಗಂಭೀರವಾಗಿ ಪರಿಗಣಿಸಬೇಕು. ಕುಟುಂಬ ದೌರ್ಜನ್ಯಕ್ಕೆ ಸಂಬಂಧಪಟ್ಟಂತೆ ದಾಖಲಾಗುವ ಪ್ರಕರಣಗಳನ್ನು ಪರಿಶೀಲಿಸಿ, ವಿಳಂಬ ಮಾಡದೇ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಮಹೆಬೂಬ್ ಜಿಲಾನಿ ಮಾತನಾಡಿ, ಬಾಲ್ಯ ವಿವಾಹ ಹಾಗೂ ಕೌಟುಂಬಿಕ ದೌರ್ಜನ್ಯ ಪ್ರಕರಣಗಳ ವಿಷಯದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯತೆ ಸಾಧಿಸಿ, ಅಧಿಕಾರಿಗಳು ಪ್ರತಿ ತಿಂಗಳಿಗೊಮ್ಮೆ ಸಭೆ ನಡೆಸುವಂತಾಗಬೇಕು ಎಂದು ತಿಳಿಸಿದರು.
ಪಂಚಾಯಿತಿ ಮಟ್ಟದಲ್ಲಿ ಅಧಿಕಾರಿಗಳು ಈ ವಿಷಯದಲ್ಲಿ ಇನ್ನಷ್ಟು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಈ ನಿಟ್ಟಿನಲ್ಲಿ ವಿಶೇಷವಾಗಿ ಮಹಿಳೆಯರನ್ನು ಒಂದೆಡೆ ಸೇರಿಸಿ, ಸಭೆಗಳನ್ನು ನಡೆಸುವ ಮೂಲಕ ಅವರನ್ನು ಜಾಗೃತಗೊಳಿಸುವ ಮೂಲಕ ಸಮಸ್ಯೆ ಉದ್ಭವಿಸದಂತೆ ನೋಡಿಕೊಳ್ಳಬಹುದು ಎಂದು ಅವರು ಹೇಳಿದರು.
ಸ್ತ್ರೀಶಕ್ತಿ ಹಾಗೂ ಐಸಿಡಿಎಸ್ ಸಮಿತಿ ವಾರ್ಡ್ ಮತ್ತು ಪಂಚಾಯಿತಿಗಳಲ್ಲಿ ಮಹಿಳಾ ಸ್ತ್ರೀಶಕ್ತಿ ಮತ್ತು ಎನ್.ಆರ್.ಎಲ್.ಎಂ. ಅಡಿಯಲ್ಲಿ ರಚನೆಯಾದ ಗುಂಪುಗಳ ಸಭೆ, ಲಿಂಗಾನುಪಾತ, ಬಾಲ್ಯ ವಿವಾಹ, ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ, ಬಾಲ ಕಾರ್ಮಿಕ ತಡೆ, ಅರಿವು ಕಾರ್ಯಕ್ರಮಗಳು, ಮಕ್ಕಳ ಕಾವಲು ಸಮಿತಿ ಹಾಗೂ ಮಹಿಳಾ ಸಭೆಗಳನ್ನು ಪ್ರತಿ ತಿಂಗಳು ನಡೆಸಲು ಸೂಚಿಸಲಾಯಿತು.
ವಿಜಯಪುರ ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ದೀಪಾಕ್ಷಿ ಜಾನಕಿ ಸಭೆಯಲ್ಲಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.