ವಿಜಯಪುರ: ನಗರದ ಮಾರುಕಟ್ಟೆ ಪ್ರದೇಶದಲ್ಲಿ ಇರುವ ಪ್ರಸಿದ್ಧ ಗಣಪತಿ ಚೌಕಿಗೆ ಕಲ್ಲೆಸೆದು, ಗಾಜುಗಳನ್ನು ಪುಡಿಗೈದ ಕಿಡಿಗೇಡಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬುಧವಾರ ರಾತ್ರಿ ಗಣಪತಿ ಚೌಕಿಗೆ ಕಲ್ಲೆಸೆದು, ಗಾಜುಗಳನ್ನು ಪುಡಿಗೈದು ದುಷ್ಕರ್ಮಿಗಳು ಪರಾರಿಯಾಗಿದ್ದರು. ವಿಷಯ ತಿಳಿಯುತ್ತಿದ್ದಂತೆ ಗುರುವಾರ ಬೆಳಿಗ್ಗೆ ಜನ ಸೇರಿದ್ದ ಕಾರಣ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ನಿಯೋಜಿಸಲಾಗಿತ್ತು.
ಗಣಪತಿ ಚೌಕಿಗೆ ಕಲ್ಲೆಸೆದು, ಗಾಜುಗಳನ್ನು ಪುಡಿಗೈದ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ, ಕಠಿಣ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಉಮೇಶ ವಂದಾಲ ಎಂಬುವವರು ದೂರು ಗಾಂಧಿ ಚೌಕಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ತಕ್ಷಣ ಎಚ್ಚೆತ್ತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ಅವರು, ಗಾಂಧಿ ಚೌಕಿ ಪೊಲೀಸ್ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಪ್ರದೀಪ ತಳಕೇರಿ ಮತ್ತು ಪಿಎಸ್‌ಐ ರಾಜು ಮಮದಾಪುರ ಅವರ ನೇತೃತ್ವದಲ್ಲಿ ತಂಡವನ್ನು ರಚಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಪುರ ನಗರದ ಟೆಕ್ಕೆ ನಿವಾಸಿ ಸೊಹೆಲ್ ಮುನ್ನಾ ಜಮಾದಾರ(21) ಎಂಬಾತನನ್ನು ಗಾಂಧಿನಗರ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಈ ಘಟನೆಯಲ್ಲಿ ಇನ್ನೊಬ್ಬ ಆರೋಪಿ ತಲೆ ಮರೆಸಿಕೊಂಡಿದ್ದು, ಬಂಧಿಸಲು ಕಾರ್ಯಾಚರಣೆ ನಡೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.