ವಿಜಯಪುರ: ಬಹು ನಿರೀಕ್ಷಿತ ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇನ್ನು ಕೇವಲ ನಾಲ್ಕು ದಿನಗಳು (ಅ.17 ಕೊನೆಯ ದಿನ) ಮಾತ್ರ ಬಾಕಿ ಉಳಿದಿದ್ದರೂಯಾವ ಪಕ್ಷದ ಅಭ್ಯರ್ಥಿಗಳು ಸ್ಪರ್ಧೆಗೆ ಹೆಚ್ಚಿನ ಆಸಕ್ತಿ ತೋರದ ಕಾರಣ ಚುನಾವಣಾ ಅಖಾಡ ಇನ್ನೂ ರಂಗೇರಿಲ್ಲ.
ಸೋಮವಾರ(ಅ.10)ದಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಇದುವರೆಗೆ ಕೇವಲ ಬಿಜೆಪಿಯಿಂದ ಎರಡು ಜನ ಮಾತ್ರ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ಉಳಿದಂತೆ ಕಾಂಗ್ರೆಸ್, ಜೆಡಿಎಸ್, ಎಎಪಿ, ಕೆಆರ್‌ಎಸ್, ಎಸ್‌ಡಿಪಿಐ ಸೇರಿದಂತೆ ಯಾವುದೇ ಸ್ವತಂತ್ರ ಅಭ್ಯರ್ಥಿಗಳು ಕೂಡ ನಾಮಪತ್ರ ಸಲ್ಲಿಸಿಲ್ಲ!
ಅ.14ರ ವರೆಗೆ ನಾಮಪತ್ರ ಸಲ್ಲಿಕೆಗೆ ದಿನ, ಸಮಯ ಸೂಕ್ತವಾಗಿಲ್ಲ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ಹೀಗಾಗಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆದಿಲ್ಲ.
ಈಗಾಗಲೇ ಎಲ್ಲ ಪಕ್ಷಗಳು ಸ್ಪರ್ಧಾಕಾಂಕ್ಷಿಗಳಿಂದ ಅರ್ಜಿಗಳನ್ನು ಸ್ವೀಕರಿಸಿದ್ದು,ಇನ್ನೆರಡು ದಿನಗಳಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿದಂತೆ ಇತರೆ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಕೊನೇಯ ಒಂದೆರಡು ದಿನಗಳಲ್ಲಿ ನಾಮಪತ್ರ ಸಲ್ಲಿಕೆ ಭರಾಟೆ ಕಂಡುಬರುವ ಸಾಧ್ಯತೆ ಇದೆ.
ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್‌ನ ಹಾಲಿ, ಮಾಜಿ ಶಾಸಕರಿಗೆ ವಿಧಾನ ಪರಿಷತ್ ಚುನಾವಣೆಗೂ ಮುನ್ನಾ ವಿಜಯಪುರ ಪಾಲಿಕೆ ಚುನಾವಣೆ ಅಗತ್ಯವಿರಲಿಲ್ಲ ಮತ್ತು ಅದರ ನಿರೀಕ್ಷೆಯಲ್ಲೂ ಇರಲಿಲ್ಲ. ಹೈಕೋರ್ಟ್ ಆದೇಶದ ಮೇರೆಗೆ ಚುನಾವಣಾ ಆಯೋಗ ದಿಡೀರನೇ ಚುನಾವಣೆ ಘೋಷಣೆ ಮಾಡಿರುವುದು ಎಲ್ಲ ಪಕ್ಷಗಳಿಗೂ ನುಂಗಲಾರದ ತುತ್ತಾಗಿದೆ.
ಬಿಜೆಪಿ ಒಗ್ಗಟ್ಟಿಗೆ ಯತ್ನ:
ಅಖಾಡದಲ್ಲಿ ಇದ್ದ ಮಟ್ಟಿಗೆ ಬಿಜೆಪಿಯಲ್ಲಿ ಒಂದಷ್ಟು ರಾಜಕೀಯ ಚಟುವಟಿಕೆಗಳು ನಡೆಯುತ್ತಿವೆ. ಮಹಾನಗರ ಪಾಲಿಕೆ ಚುನಾವಣಾ ಉಸ್ತುವಾರಿ, ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ ಕುಮಾರ್ ಸುರಾನಾ ಅವರು ಸ್ಥಳೀಯ ಮುಖಂಡರೊಂದಿಗೆ ಸಭೆಗಳನ್ನು ನಡೆಸಿ, ಒಗ್ಗಟ್ಟು ಪ್ರದರ್ಶನಕ್ಕೆ ಪ್ರಯತ್ನ ನಡೆಸಿದ್ದಾರೆ.
ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಸೇರಿದಂತೆ ಬಿಜೆಪಿಯ ಎರಡೂ ಬಣದ ಮುಖಂಡರು ಸಭೆಯಲ್ಲಿ ಭಾಗವಹಿಸಿರುವುದು ವಿಶೇಷವಾಗಿದೆ. ಈ ಮೂಲಕ ಪಾಲಿಕೆ ಚುನಾವಣೆಯನ್ನು ಒಗ್ಗಟ್ಟಿನಿಂದ ಎದುರಿಸಿ, ಅಧಿಕಾರದ ಗದ್ದುಗೆಗೆ ಲಗ್ಗೆ ಇಡಲು ತೆರೆಮರೆಯಲ್ಲಿ ಸಿದ್ಧತೆ ನಡೆಸಲಾಗಿದೆ.
ಸಭೆ ಸೇರಿದ ಕಾಂಗ್ರೆಸ್:
ಪಾಲಿಕೆ ಚುನಾವಣೆ ಎದುರಿಸಲು ಕಾಂಗ್ರೆಸ್‌ನಲ್ಲೂ ಚುನಾವಣಾ ಸಮಿತಿ ರಚನೆ ಮಾಡಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ, ಶಾಸಕರಾದ ಯಶವಂತರಾಯಗೌಡ ಪಾಟೀಲ, ಶಿವಾನಂದ ಪಾಟೀಲ, ಮಾಜಿ ಶಾಸಕ ಸಿ.ಎಸ್.ನಾಡಗೌಡ, ಜಿಲ್ಲಾ ಘಟಕದ ಅಧ್ಯಕ್ಷ ರಾಜು ಆಲಗೂರ, ಮುಖಂಡ ಹಮೀದ್ ಮುಶ್ರೀಫ್, ವಿಧಾನ ಪರಿಷತ್ ಸದಸ್ಯರಾದ ಸುನೀಲ್ ಗೌಡ ಪಾಟೀಲ, ಪ್ರಕಾಶ ರಾಠೋಡ ಅವರನ್ನು ಒಳಗೊಂಡ ಸಮಿತಿಯನ್ನು ರಚನೆ ಮಾಡಲಾಗಿದೆ. ಆದರೆ, ಇವರಲ್ಲಿ ಬಹುತೇಕ ಮುಖಂಡರು ‘ಭಾರತ್ ಜೋಡೊ’ ಪಾದಯಾತ್ರೆಯಲ್ಲಿ ತೊಡಗಿರುವುದರಿಂದ ಇದುವರೆಗೂ ಸಭೆ ಸೇರಿಲ್ಲ.
ಜೆಡಿಎಸ್ ಪಟ್ಟಿ ಸಿದ್ಧ:
ಪಾಲಿಕೆ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಜೆಡಿಎಸ್ ತೆರೆಮರೆಯಲ್ಲಿ ಸಿದ್ಧತೆ ನಡೆಸಿದೆ. ನಾಗಠಾಣ ಕ್ಷೇತ್ರದ ಶಾಸಕ ದೇವಾನಂದ ಚವ್ಹಾಣ ಅವರ ಕ್ಷೇತ್ರದ ವಾರ್ಡ್‌ಗಳಲ್ಲಿ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಈಗಾಗಲೇ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧವಾಗಿಟ್ಟುಕೊಂಡಿದ್ದಾರೆ.
ಎರಡು ನಾಮಪತ್ರ:
ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ಇದುವರೆಗೂ ಬಿಜೆಪಿ ಅಧಿಕೃತ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿಲ್ಲವಾದರೂ ಇಬ್ಬರು ನಾಮಪತ್ರ ಸಲ್ಲಿಸಿದ್ದಾರೆ.
ಸಾಮಾನ್ಯ ಮಹಿಳಾ ಕ್ಷೇತ್ರವಾದ31ನೇ ವಾರ್ಡ್‌ಗೆ ಬಿಜೆಪಿಯಿಂದ ಸುನಂದಾ ಸೂರ್ಯವಂಶಿ ಹಾಗೂ26ನೇ ವಾರ್ಡ್‌ಗೆ ಕಿರಣ ಪಾಟೀಲ ನಾಮಪತ್ರ ಸಲ್ಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.