ADVERTISEMENT

ವೃಕ್ಷಥಾನ್ ಯಶಸ್ಸಿಗೆ ಸಹಕಾರ ಅಗತ್ಯ: ಭೂಬಾಲನ್

ವೃಕ್ಷಥಾನ್ ಹೆರಿಟೇಜ್ ರನ್- 2024 ಪೂರ್ವಭಾವಿ ಸಭೆ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2024, 14:54 IST
Last Updated 22 ಅಕ್ಟೋಬರ್ 2024, 14:54 IST
ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ವೃಕ್ಷಥಾನ್ ಹೆರಿಟೇಜ್ ರನ್ -2024ರ ಸಿದ್ಧತಾ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ. ಭೂಬಾಲನ್ ಮಾತನಾಡಿದರು
ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ವೃಕ್ಷಥಾನ್ ಹೆರಿಟೇಜ್ ರನ್ -2024ರ ಸಿದ್ಧತಾ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ. ಭೂಬಾಲನ್ ಮಾತನಾಡಿದರು   

ವಿಜಯಪುರ: ಪರಿಸರ, ಪ್ರಾಚೀನ ಸ್ಮಾರಕ, ಆರೋಗ್ಯ ಮತ್ತು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವುದಕ್ಕಾಗಿ ಡಿಸೆಂಬರ್  22ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2024ರ ಕಾರ್ಯಕ್ರಮಕ್ಕೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳು, ಇಲಾಖಾ ನೌಕರರು ನೋಂದಣಿ ಮಾಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ವೃಕ್ಷಥಾನ್ ಹೆರಿಟೇಜ್ ರನ್ -2024ರ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲಾಡಳಿತದ ಸಹಕಾರದೊಂದಿಗೆ ಕೋಟಿ ವೃಕ್ಷ ಅಭಿಯಾನ, ಸೊಸೈಟಿ ಫಾರ್ ಪ್ರೊಟೆಕ್ಷನ್ ಆಫ್ ಪ್ಲಾಂಟ್ ಆ್ಯಂಡ್ ಅನಿಮಲ್ಸ್‌, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ, ಬಿಎಲ್‍ಡಿಇ ಅಸೋಸಿಯೇಶನ್, ಪ್ರವಾಸೋದ್ಯಮ ಇಲಾಖೆ, ಅರಣ್ಯ ಇಲಾಖೆ,  ಸಿಆರ್‌ಡಿಎಸ್ ಫೌಂಡೇಶನ್, ಮಹಾನಗರ ಪಾಲಿಕೆ ಪ್ರಾಯೋಜಕತ್ವದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರ ಪಾಲ್ಗೊಳ್ಳುವಿಕೆಗೆ ನೋಂದಣಿ ಮಾಡುವ ಗುರಿ ಹೊಂದಬೇಕು ಎಂದು ಹೇಳಿದರು.

ADVERTISEMENT

21 ಕಿ.ಮೀ, 10 ಕಿ.ಮೀ, 5 ಕಿ.ಮೀ ಮ್ಯಾರಥಾನ್ ನಡೆಯಲಿದ್ದು, ಕ್ರಮವಾಗಿ ₹ 1,200, ₹ 1ಸಾವಿರ ಹಾಗೂ ₹ 600 ನೋಂದಣಿ ಶುಲ್ಕವಿದೆ. ಪ್ರವಾಸೋದ್ಯಮ ಹಾಗೂ ಪರಿಸರ ಜಾಗೃತಿಯ ಕುರಿತ ವೃಕ್ಷಥಾನ್ ಹೆರಿಟೇಜ್ ರನ್ ಕಾರ್ಯಕ್ರಮದ ಯಶಸ್ಸಿಗೆ ಶಾಲಾ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಗಳು ತಮ್ಮ ಅಧೀನದಲ್ಲಿರುವ ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮದ ಮಹತ್ವವನ್ನು ಪ್ರಚುರಪಡಿಸುವುದರ ಮೂಲಕ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಗೆ ಸಹಕರಿಸಬೇಕು ಎಂದು ಹೇಳಿದರು.

ತೋಟಗಾರಿಕೆ ಹಾಗೂ ಕೃಷಿ ಇಲಾಖೆಗಳು ರೈತ ಉತ್ಪಾದನ ಸಂಸ್ಥೆ, ಪ್ರಗತಿಪರ ರೈತರ ಗುಂಪುಗಳು, ತಾಲ್ಲೂಕು ಹಾಗೂ ಗ್ರಾಮ ಮಟ್ಟದಲ್ಲಿಯೂ ಕೂಡ ಹೆರಿಟೇಜ್ ರನ್‍ಗೆ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿ ಭಾಗವಹಿಸುವಂತೆ ಪ್ರೇರೇಪಿಸುವಲ್ಲಿ ಸಿದ್ಧತೆ ಮಾಡಿಕೊಳ್ಳಬೇಕು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸೈನಿಕ ಕಲ್ಯಾಣ ಇಲಾಖೆಗಳು ಯುವ ಜನರು ಪಾಲ್ಗೊಳಲು ಅಗತ್ಯ ಕ್ರಮ ವಹಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಹೆಣ್ಣು ಮಕ್ಕಳ ನೋಂದಣಿಗೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಮಾತನಾಡಿ, ‘ವೃಕ್ಷತ್ಥಾನ್ ಹೆರಿಟೇಜ್ ರನ್‌ಗೆ ಎಲ್ಲ ಇಲಾಖೆಗಳೂ ಸಂಪೂರ್ಣ ಕೈಜೊಡಿಸಬೇಕು. ಈ ನಿಟ್ಟಿನಲ್ಲಿ ಸಹಕಾರ ನೀಡಲಾಗುವುದು’ ಎಂದು ತಿಳಿಸಿದರು.  

ಜಿಲ್ಲಾ ಉಸ್ತುವಾರಿ ಸಚಿವರ ಸಾರ್ವಜನಿಕ ಸಂಪರ್ಕಾಧಿಕಾರಿ ಮಹಾಂತೇಶ ಬಿರಾದಾರ ಮಾತನಾಡಿ, ‘ವಿಜಯಪುರದಲ್ಲಿ ಅರಣ್ಯ ಪ್ರದೇಶ ಕಡಿಮೆ ಇರುವುದು ಮನಗಂಡ ಜಿಲ್ಲಾ ಉಸ್ತಾವರಿ ಸಚಿವ ಎಂ.ಬಿ. ಪಾಟೀಲರು ಕೋಟಿ ವೃಕ್ಷ ಅಭಿಯಾನದ ಅಡಿಯಲ್ಲಿ ಜಿಲ್ಲೆಯಲ್ಲಿ ಅರಣ್ಯೀಕರಣಕ್ಕೆ ಒತ್ತು ನೀಡಿದ ಫಲವಾಗಿ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಉದ್ಯಾನ, ಹಸಿರೀಕರಣ, ಅರಣ್ಯ ಪ್ರದೇಶಗಳು ವಿಸ್ತಾರಗೊಳ್ಳುತ್ತಿದೆ’ ಎಂದರು.

ಮಮದಾಪುರದ ಮೀಸಲು ಅರಣ್ಯ ಪ್ರದೇಶಕ್ಕೆ ಸಿದ್ಧೇಶ್ವರ ಸ್ವಾಮಿಜಿಯವರ ಹೆಸರು ನಾಮಕರಣ ಮಾಡಿದ್ದು ಸಂತಸ ತಂದಿದೆ. ಜಿಲ್ಲಾಡಳಿತದ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಜನರಲ್ಲಿಯೂ ಕೂಡ ಈಗ ಸಸಿಗಳನ್ನು ನೆಡುವ ಮೂಲಕ ಅರಣ್ಯೀಕರಣಕ್ಕೆ ಒತ್ತು ನೀಡುವ ಮನೋಭಾವ ಬಂದಿದೆ. ಈ ಮೂಲಕ ವೃಕ್ಷಥಾನ್ ಕಾರ್ಯಕ್ರಮದ ಮೂಲ ಉದ್ದೇಶ ಸಾಕಾರಗೊಳ್ಳುತ್ತಿದೆ ಎಂದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಅರಣ್ಯ ಇಲಾಖೆ ಶಿವಶರಣಯ್ಯ ಕೆ., ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಬಜಂತ್ರಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ರೂಪಾ ಎಲ್., ಸಮಾಜಕಲ್ಯಾಣ ಇಲಾಖೆಯ ಉಪನಿರ್ದೇಶಕ ಪುಂಡಲಿಕ ಮಾನವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಿ, ವೃಕ್ಷಥಾನ್ ಹೆರಿಟೇಜ್ ರನ್ ಸಂಚಾಲಕ ಮುರುಗೇಶ ಪಟ್ಟಣಶೆಟ್ಟಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.