ಯಾದಗಿರಿ: ಮಕ್ಕಳು ಸ್ವತಃ ತಮ್ಮನ್ನು ಕಾಡುತ್ತಿರುವ ಸಮಸ್ಯೆಗಳನ್ನು ಗುರುತಿಸಿ ಮಾಡಿದ ಪಟ್ಟಿಯನ್ನು ಜನಪ್ರತಿನಿಧಿಗಳಿಗೆ ತಲುಪಿಸಿ, ಆ ಸಮಸ್ಯೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸುವಂತೆ ಮಾಡುವ ಉದ್ದೇಶದಿಂದ ಮಕ್ಕಳ ಸಂಸತ್ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಜಿಲ್ಲಾ ಬಾಲ ಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕ ರಘುವೀರಸಿಂಗ್ ಠಾಕೂರ್ ಹೇಳಿದರು.
ಗುರುಮಠಕಲ್ ತಾಲ್ಲೂಕಿನ ಕಂದಕೂರ ಗ್ರಾಮದ ಎಸ್.ಎಲ್.ವಿ ಮೆಮೋರಿಯಲ್ ಶಾಲೆಯಲ್ಲಿ ಈಚೆಗೆ ಕರ್ನಾಟಕ ಮಕ್ಕಳ ಹಕ್ಕುಗಳ ನಿಗಾ ಕೇಂದ್ರ, ಚೈಲ್ಡ್ ರೈಟ್ಸ್ ಟ್ರಸ್ಟ್, ಹಾಗೂ ಅನಂತ ಸೇವಾ ಟ್ರಸ್ಟ್ ಆಶ್ರದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ‘ಮಕ್ಕಳ ಸಂಸತ್’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರಾಜ್ಯದ ವಿವಿಧ ಭಾಗಗಳಲ್ಲಿನ ಮಕ್ಕಳ ಯಾವ ಸಮಸ್ಯೆ, ಬೇಡಿಕೆಗಳನ್ನು ವಿಧಾನ ಪರಿಷತ್ತು ಮತ್ತು ವಿಧಾನ ಸಭೆಯಲ್ಲಿ ಚರ್ಚೆಗೆ ಜನಪ್ರತಿನಿಧಿಗಳು ತೆಗೆದುಕೊಳ್ಳಬೇಕು? ಬಾಲ್ಯ ವಿವಾಹ, ಬಾಲ ಕಾರ್ಮಿಕ, ಜೀತ ಪದ್ಧತಿ, ಮಕ್ಕಳ ಮೇಲೆ ಆಗುವ ಲೈಂಗಿಕ ದೌರ್ಜನ್ಯಗಳು, ಕಾಣೆಯಾದ ಮಕ್ಕಳ ಇಂತಹ ಹಲವಾರು ವಿಚಾರವಾಗಿ ಮಕ್ಕಳೊಡನೆ ಸಮಾಲೋಚನೆ ನಡೆಸಲಾಗುತ್ತಿದೆ. ಜಿಲ್ಲಾ ಮಟ್ಟದಲ್ಲಿ ಮಕ್ಕಳೇ ಗುರುತಿಸುವ ಸಮಸ್ಯೆಗಳನ್ನು ರಾಜ್ಯ ಮಟ್ಟದ ಮಕ್ಕಳ ಸಂಸತ್ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಜೊತೆ ಮಕ್ಕಳೆ ಚರ್ಚಿಸುವ ಅವಕಾಶವನ್ನು ಕಲ್ಪಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮಿಕೊಳ್ಳಲಾಗಿದೆ. ಮಕ್ಕಳು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಮಿಕ ನಿರೀಕ್ಷಕ ಶಿವಶಂಕರ ಬಿ.ತಳವಾರ ಮಾತನಾಡಿ, ಅಸಂಘಟಿತ ಕಾರ್ಮಿಕರಿಗೆ ಪ್ರಧಾನಮಂತ್ರಿ ಶ್ರಮಯೋಗಿ ಮಾನ್‍ಧನ್ ಯೋಜನೆ ಭವಿಷ್ಯದಲ್ಲಿ ನೆರವಾಗಲಿದೆ. ಆದ್ದರಿಂದ ಪ್ರತಿಯೊಬ್ಬ ಅಸಂಘಟಿತ ಕಾರ್ಮಿಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಕಾರ್ಮಿಕ ಇಲಾಖೆಯಿಂದ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರ ಮಹಾಲಕ್ಷ್ಮೀ ಸಜ್ಜನ್ ಅವರು ಮಾತನಾಡಿ, ಕೋಟ್ಪಾ-2003 ಕಾಯ್ದೆಯಡಿಯಲ್ಲಿ ಹೋಟೆಲ್, ರೆಸ್ಟೊರೆಂಟ್, ಬಾರ್, ದಾಬಾ, ಅಂಗಡಿಗಳಲ್ಲಿ ಮತ್ತು ಶಾಲಾ-ಕಾಲೇಜು ಪ್ರದೇಶದ 100 ಮೀಟರ್ ಅಂತರದಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕಿಗೆ ಸಂಬಂಧಿಸಿದ ಉತ್ಪನ್ನಗಳನ್ನು ಬಹಿರಂಗವಾಗಿ ಮಕ್ಕಳಿಂದ ಮಾರುವುದಕ್ಕೆ ಪ್ರಚೋದನೆ ನೀಡುವುದು, ದುಡಿಸಿಕೊಳ್ಳುವುದು ಮತ್ತು ಸೇದುವುದು ಕಾನೂನಿನ ಪ್ರಕಾರ ನಿಷೇಧಿಸಲಾಗಿರುತ್ತದೆ. ನಿಯಮಗಳನ್ನು ಉಲ್ಲಂಘಿಸಿದಲ್ಲಿ ದಂಡ ವಿಧಿಸುವುದರ ಜೊತೆಗೆ ಶಿಕ್ಷೆಗೆ ಒಳಪಡಬೇಕಾಗುತ್ತದೆ ಎಂದು ತಿಳಿವಳಿಕೆ ನೀಡಿದರು. ಅನಂತ ಸೇವಾ ಟ್ರಸ್ಟ್ ಅಧ್ಯಕ್ಷ ಶರಣಪ್ಪ ಎಸ್. ಪ್ರಾಸ್ತಾವಿಕವಾಗಿ ಮಾತ ನಾಡಿದರು. ಎಸ್ಎಂ .ಬೋಥಾಲ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.