ಯಾದಗಿರಿ: ಜಿಲ್ಲೆಯ ಕೆಂಭಾವಿ ಸಮೀಪದ ಆಲ್ಹಾಳ ಗ್ರಾಮದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಅನಧಿಕೃತವಾಗಿ ನಡೆಸುತ್ತಿದ್ದ ಕಲ್ಲು ಗಣಿಗಾರಿಕೆ ಮೇಲೆ ಕಲಬುರ್ಗಿ–ಯಾದಗಿರಿ ಆಂತರಿಕ ಭದ್ರತಾ ವಿಭಾಗ, ಜಿಲ್ಲಾ ಪೊಲೀಸರು ಭಾನುವಾರ ದಾಳಿ ನಡೆಸಿ ಸುಮಾರು 750 ಕೆ.ಜಿ ಸ್ಫೋಟಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
ಕಲಬುರ್ಗಿ–ಯಾದಗಿರಿ ಆಂತರಿಕ ಭದ್ರತಾ ವಿಭಾಗದ ಸಿಪಿಐ ಅಡವಪ್ಪ ಬನ್ನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ ನೇತೃತ್ವದಲ್ಲಿ ಸ್ಫೋಟಕ ಜಪ್ತಿ ಮಾಡಿಕೊಂಡಿದ್ದಾರೆ. ಕಲ್ಲು ಗಣಿಗಾರಿಕೆ ಜಾಗ ಮುದ್ದೇಬಿಹಾಳ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರ ಸಂಬಂಧಿಕರೊಬ್ಬರಿಗೆ ಸೇರಿದ್ದು ಎನ್ನಲಾಗುತ್ತಿದೆ.
ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿ, ‘ಕಲ್ಲು ಗಣಿಕಾರಿಕೆ ಮೇಲೆ ದಾಳಿ ಮಾಡಲಾಗಿದ್ದು, ಜಿಲೆಟಿನ್ ಕಡ್ಡಿಗಳನ್ನು ವಶಪಡಿಸಿಕೊಳ್ಳಲಾಗಿದೆ. ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ನಂತರ ಎಫ್‌ಐಆರ್ ದಾಖಲಿಸಲಾಗುವುದು’ ಎಂದರು.
‘ಗಣಿಗಾರಿಕೆ ಮೇಲೆ ದಾಳಿ ಮಾಡಿರುವ ವಿಷಯ ನನಗೆ ಗೊತ್ತಿಲ್ಲ. ಪರಿಶೀಲಿಸಿ ಮಾಹಿತಿ ನೀಡಲಾಗುವುದು’ ಎಂದು ಹಿರಿಯ ಭೂವಿಜ್ಞಾನಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಸೈಫುಲ್ಲ ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.