ಯಾದಗಿರಿ: ಮಹಿಳೆಯರು, ಮಕ್ಕಳು ಹಾಗೂ ತುಳಿತಕ್ಕೆ ಒಳಗಾದ ಸಮುದಾಯ, ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದವರು ಕಾನೂನು ನೆರವು ಪಡೆಯಬಹುದಾಗಿದೆ. ದೌರ್ಜನ್ಯಕ್ಕೆ ಒಳಗಾದ ಯಾವುದೇ ಸಮುದಾಯ ವ್ಯಕ್ತಿಗಳು ಕಾನೂನು ನೆರವು ಪಡೆಯಬಹುದಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮರಿಯಪ್ಪ ಹೇಳಿದರು.
ನಗರದ ಮಹಿಳಾ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಮಹಿಳಾ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಸಂಯುಕ್ತಾಶ್ರಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ‘ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ’ ಅಂಗವಾಗಿ ಕಾನೂನು ಅರಿವು- ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಉಚಿತ ಕಾನೂನು ಅರಿವು ಮತ್ತು ನೆರವಿನ ಲಭ್ಯತೆಯ ಬಗ್ಗೆ ಜನರಿಗೆ ತಿಳಿಸಲು ರಾಷ್ಟ್ರೀಯ ಕಾನೂನು ಸೇವೆಗಳ ದಿನವನ್ನು ದೇಶಾದಾದ್ಯಂತ ಆಚರಿಸಲಾಗುತ್ತಿದೆ. ಪ್ರತಿ ವರ್ಷ ನವೆಂಬರ್ 9 ರಂದು ರಾಷ್ಟ್ರೀಯ ಕಾನೂನು ಸೇವೆಗಳ ದಿನವನ್ನು ಆಚರಿಸುತ್ತದೆ. 1993 ರಿಂದ ರಾಷ್ಟ್ರೀಯ ಕಾನೂನು ಸೇವೆಗಳ ದಿನ ಆಚರಿಸುತ್ತ ಬರಲಾಗುತ್ತಿದೆ ಎಂದು ತಿಳಿಸಿದರು.
ರಾಷ್ಟ್ರೀಯ ಮಟ್ಟದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಮಟ್ಟದಲ್ಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳು, ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲ್ಲೂಕು ಮಟ್ಟದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿಗಳು ಕಾನೂನು ಅರಿವು ಮತ್ತು ನೆರವು ನೀಡಲು ಕೆಲಸ ಮಾಡುತ್ತಿವೆ ಎಂದು ಹೇಳಿದರು.
ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕ ಉದಯಕುಮರ್ ದೊಡ್ಡಮನಿ ಮಾತನಾಡಿ, ಸಾಮಾನ್ಯ ನಾಗರಿಕರು ಸಂವಿಧಾನ ನೀಡಿದ ತಮ್ಮ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಮಾಹಿತಿ ತಿಳಿದಿರಬೇಕು. ಪ್ರತಿಯೊಬ್ಬರು ಹಕ್ಕುಗಳು ಪಡೆಯಬೇಕು. ಅದರಂತೆ ಕರ್ತವ್ಯ ಪಾಲನೆ ಮಾಡಬೇಕು ಎಂದು ಹೇಳಿದರು.
ಪ್ರಾಂಶುಪಾಲರು ಹರೀಶ್ ರಾಠೋಡ್, ಎಲ್ಲರಿಗೂ ಕಾನೂನಿನ ಮೂಲಕ ದೊರೆಯಬೇಕಾದ ಸೌಲಭ್ಯಗಳನ್ನು ದೊರಕಿಸಿಕೊಡಲು ಕಾನೂನು ಸೇವಾ ಪ್ರಾಧಿಕಾರ ಶ್ರಮಿಸುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಸಿಬ್ಬಂದಿ, ಶಿಕ್ಷಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.