ಯಾದಗಿರಿ: ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಹಿಮಾಲಪುರ ಗ್ರಾಮದಲ್ಲಿ ಬುಧವಾರ ಮತ್ತೆ 26 ಜನರಲ್ಲಿ ವಾಂತಿ–ಭೇದಿ, ಹೊಟ್ಟೆ ನೋವು ಕಾಣಿಸಿಕೊಂಡಿದೆ. ಕಲುಷಿತ ನೀರು ಸೇವನೆಯಿಂದಲೇ ವಾಂತಿ–ಭೇದಿ ಕಾಣಿಸಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಸೋಮವಾರ ಸಂಜೆಯಿಂದ ವಾಂತಿ, ಭೇದಿ ಪ್ರಕರಣಗಳು ಕಾಣಿಸಿಕೊಂಡಿದ್ದು, ಮಂಗಳವಾರ ಸಂಜೆ ವೇಳೆಗೆ 54 ಜನ ಅಸ್ವಸ್ಥರಾಗಿದ್ದರು. ಮಂಗಳವಾರ ರಾತ್ರಿಯಿಂದ ಬುಧವಾರ ಸಂಜೆವರೆಗೆ ಮತ್ತೆ 26 ಜನ ಅಸ್ವಸ್ಥರಾಗಿದ್ದು, ಪ್ರಕರಣದ ಸಂಖ್ಯೆ 80ಕ್ಕೆ ಏರಿಕೆಯಾಗಿದೆ. ಇದರಲ್ಲಿ 40 ಜನ ಗುಣಮುಖರಾಗಿದ್ದಾರೆ.
ಗುರುಮಠಕಲ್ ಸಮುದಾಯ ಆರೋಗ್ಯ ಕೇಂದ್ರದಲ್ಲಿ 14 ಜನ, ಹಿಮಾಲಪುರ ತಾತ್ಕಾಲಿಕ ಚಿಕಿತ್ಸಾ ಕೇಂದ್ರದಲ್ಲಿ 8 ಜನ, ಯಾದಗಿರಿ ಜಿಲ್ಲಾ ಆಸ್ಪತ್ರೆಯಲ್ಲಿ 4 ಜನ, ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಒಬ್ಬರು ಚಿಕಿತ್ಸೆಗೆ ದಾಖಲಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಗ್ರಾಮಸ್ಥರು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರು ಯಾದಗಿರಿ ಜಿಲ್ಲಾ ಆಸ್ಪತ್ರೆ, ಗುರುಮಠಕಲ್ ತಾಲ್ಲೂಕು ಆಸ್ಪತ್ರೆ ಹಾಗೂ ಹಿಮಾಲಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತೆರೆದಿರುವ ತಾತ್ಕಾಲಿಕ ಚಿಕಿತ್ಸಾ ಕೇಂದ್ರಕ್ಕೆ ತೆರಳಿ ರೋಗಿಗಳ ಆರೋಗ್ಯ ವಿಚಾರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.