ಬೆಂಗಳೂರು: ತಂದೆಯ ಆದಾಯ ಪ್ರಮಾಣಪತ್ರ ಸಲ್ಲಿಸಿದ್ದ ವಿವಾಹಿತ ಮಹಿಳೆಯರನ್ನೂ ಒಳಗೊಂಡು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8 ತರಗತಿ) ಪರಿಷ್ಕೃತ ಆಯ್ಕೆ ಪಟ್ಟಿಯನ್ನು ಒಂದು ವಾರದಲ್ಲಿ ಪ್ರಕಟಿಸಲಾಗುತ್ತಿದೆ.
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ (6ರಿಂದ 8ನೇ ತರಗತಿ) ಖಾಲಿ ಇರುವ 15 ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರ ಹುದ್ದೆಗೆ 2022ರ ಮಾರ್ಚ್‌ನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧಿಸೂಚನೆ ಹೊರಡಿಸಿತ್ತು. ತಂದೆಯ ಆದಾಯ ಪ್ರಮಾಣ ಪತ್ರ ಸಲ್ಲಿಸಿದ್ದಾರೆ ಎಂಬ ಕಾರಣಕ್ಕಾಗಿ ವಿವಾಹಿತ ಮಹಿಳೆಯರನ್ನು ಅಂತಿಮ ಆಯ್ಕೆ ಪಟ್ಟಿಯಿಂದ ಕೈಬಿಡಲಾಗಿತ್ತು.
ಈ ಕುರಿತು ’ಪ್ರಜಾವಾಣಿ’ ನ.22ರ (2022) ಸಂಚಿಕೆಯಲ್ಲಿ ‘ಶಿಕ್ಷಕಿಯಾಗುವ ಕನಸು ಕಿತ್ತುಕೊಂಡ ಮದುವೆ’ ಶೀರ್ಷಿಕೆಯಲ್ಲಿ ವಿಶೇಷ ವರದಿ ಪ್ರಕಟಿಸಿತ್ತು.
‘ಕೋರ್ಟ್ ತೀರ್ಪಿನ ಕುರಿತು ಮುಖ್ಯ ಕಾರ್ಯದರ್ಶಿ, ಅಡ್ವೊಕೇಟ್ ಜನರಲ್, ಕಾನೂನು ಇಲಾಖೆ, ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳ |ಜತೆ ಸಭೆ ನಡೆಸಿದ ಬಳಿಕ ತಾತ್ಕಾಲಿಕ ಆಯ್ಕೆ ಪಟ್ಟಿ ಪರಿಷ್ಕರಿಸಲು ತೀರ್ಮಾನಿಸಲಾಗಿತ್ತು. ಮುಂದಿನ ಶೈಕ್ಷಣಿಕ ವರ್ಷದ ಆರಂಭದ ವೇಳೆಗೆ ಹೊಸ ಶಿಕ್ಷಕರ ಸೇವೆ ಪಡೆದುಕೊಳ್ಳಲು ತ್ವರಿತವಾಗಿ ಪಟ್ಟಿ ಪ್ರಕಟಿಸಲಾಗುತ್ತಿದೆ’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಅವರು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.