ಶಿರಾ: ತಾಲ್ಲೂಕಿನ ಹುಲಿಕುಂಟೆ ಹೋಬಳಿಯಲ್ಲಿ ಮಂಗಳವಾರ ಹಾಲಿ ಮತ್ತು ಮಾಜಿ ಶಾಸಕರು ಕಾಂಗ್ರೆಸ್ - ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರ ಪರವಾಗಿ ಜಂಟಿ ಪ್ರಚಾರ ನಡೆಸಿದ್ದು ವಿಶೇಷವಾಗಿತ್ತು.
ಹಾಲಿ ಶಾಸಕ ಬಿ.ಸತ್ಯನಾರಾಯಣ ಹಾಗೂ ಮಾಜಿ ಶಾಸಕ ಟಿ.ಬಿ.ಜಯಚಂದ್ರ ಇದುವರೆಗೂ ಪರಸ್ಪರ ವಿರುದ್ಧವಾಗಿ ಸೆಣಸಾಡುತ್ತಿದ್ದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಪ್ರಥಮ ಬಾರಿಗೆ ಮೈತ್ರಿ ಕೂಟದ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರ ಪರವಾಗಿ ಬಹಿರಂಗವಾಗಿ ಚಿರತಹಳ್ಳಿ ಗ್ರಾಮದಲ್ಲಿ ಮತಯಾಚನೆ ಮಾಡಿದರು.
ಶಾಸಕ ಬಿ.ಸತ್ಯನಾರಾಯಣ ಮಾತನಾಡಿ, ದೇಶದ ಹಿತದೃಷ್ಟಿಯಿಂದ ಕೋಮುವಾದಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರದಂತೆ ತಡೆಯುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ರಾಜ್ಯದಲ್ಲಿ ಮೈತ್ರಿಕೂಟದ ಅಭ್ಯರ್ಥಿಗಳು ಹೆಚ್ಚು ಜಯಗಳಿಸಿದರೆ ಸಮ್ಮಿಶ್ರ ಸರ್ಕಾರಕ್ಕೆ ಹೆಚ್ಚಿನ ಬಲ ಬರುವುದರಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ಮಾಜಿ ಸಚಿವ ಟಿ.ಬಿ.ಜಯಚಂದ್ರ ಮಾತನಾಡಿ, ದೇಶದ ರಾಜಕೀಯ ದಿಕ್ಸೂಚಿ ಬದಲಾವಣೆ ದೃಷ್ಟಿಯಿಂದ ಮೈತ್ರಿ ಕೂಟದ ಅಭ್ಯರ್ಥಿಗಳ ಗೆಲುವು ಅನಿವಾರ್ಯವಾಗಿದೆ. ಆದ್ದರಿಂದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಹಾಗೂ ತುಮಕೂರು ಲೋಕಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಚ್.ಡಿ.ದೇವೇಗೌಡ ಅವರಿಗೆ ಮತ ನೀಡುವಂತೆ ಮನವಿ ಮಾಡಿದರು.
ಸಂಸದ ಬಿ.ಎನ್.ಚಂದ್ರಪ್ಪ, ಮಾಜಿ ಶಾಸಕ ಸಾಲಿಂಗಯ್ಯ, ರಾಜ್ಯ ಜೆಡಿಎಸ್ ಸಂಘಟನಾ ಕಾರ್ಯದರ್ಶಿ ಕಲ್ಕೆರೆ ರವಿಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಆರ್.ಮಂಜುನಾಥ್, ಜೆಡಿಎಸ್ ಅಧ್ಯಕ್ಷ ಆರ್.ಉಗ್ರೇಶ್, ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಬರಗೂರು ನಟರಾಜು, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಟಿ.ಡಿ.ಮಲ್ಲೇಶ್, ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷ ಎಚ್.ಗುರುಮೂರ್ತಿ, ಕೆಪಿಸಿಸಿ ಸದಸ್ಯ ಸತ್ಯನಾರಾಯಣ, ಎಂ.ಆರ್. ಶಶಿಧರಗೌಡ, ಪ್ರಕಾಶ್‌ಗೌಡ, ಗೋಣಿಹಳ್ಳಿ ದೇವರಾಜು, ಮಂಜುನಾಥ್, ಬೆಜ್ಜಿಹಳ್ಳಿ ರಾಮಚಂದ್ರಪ್ಪ, ನರಸಿಂಹಯ್ಯ, ಲೋಕೇಶ್ ಸೇರಿದಂತೆ ಎರಡು ಪಕ್ಷಗಳ ಮುಖಂಡರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.