ನವದೆಹಲಿ: ಸಂವಿಧಾನದ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ ಕೇಂದ್ರ ಸರ್ಕಾರದ ನಿರ್ಧಾರವು ಜಮ್ಮು ಮತ್ತು ಕಾಶ್ಮೀರದ ಶೇಕಡಾವಾರು ಮತದಾನದಲ್ಲಿ ಪ್ರತಿಫಲಿಸಿದೆ ಮತ್ತು ಪ್ರಜಾಪ್ರಭುತ್ವದಲ್ಲಿ ಜನರ ನಂಬಿಕೆಯನ್ನು ಹೆಚ್ಚಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಹೇಳಿದ್ದಾರೆ.
ನಾಲ್ಕನೇ ಹಂತದಲ್ಲಿ ಶ್ರೀನಗರ ಲೋಕಸಭಾ ಕ್ಷೇತ್ರದಲ್ಲಿ ಶೇ 38ರಷ್ಟು ಮತದಾನವಾಗಿದೆ. ಈ ಕುರಿತು ಅಮಿತ್ ಶಾ ಉಲ್ಲೇಖ ಮಾಡಿದ್ದಾರೆ.
ಶ್ರೀನಗರದಲ್ಲಿ 2019ರಲ್ಲಿ ಶೇ 14.43, 2014ರಲ್ಲಿ ಶೇ 25.86 ಮತ್ತು 2004ರಲ್ಲಿ ಶೇ 15.57ರಷ್ಟು ಮತದಾನವಾಗಿತ್ತು. ಆದರೆ ಈ ಬಾರಿ ಮತದಾನ ಪ್ರಮಾಣದಲ್ಲಿ ಹೆಚ್ಚಳ ಕಂಡುಬಂದಿದೆ.
ಸಂವಿಧಾನದ 370ನೇ ವಿಧಿ ರದ್ದುಗೊಳಿಸುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ನಿರ್ಧಾರವು ಮತದಾನದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ. ಇದು ಪ್ರಜಾಪ್ರಭುತ್ವದಲ್ಲಿ ಜನರ ನಂಬಿಕೆಯನ್ನು ಹೆಚ್ಚಿಸಿದ್ದು, ಆಳವಾಗಿ ನೆಲೆಯೂರಿದೆ ಎಂದು ಹೇಳಿದ್ದಾರೆ.
ಮತದಾನ ಹೆಚ್ಚಳದ ಮೂಲಕ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದತಿಯನ್ನು ವಿರೋಧಿಸಿದವರಿಗೆ ಜನರು ತಕ್ಕ ಉತ್ತರವನ್ನು ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.