ಸೂರತ್: ‘ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರ ತಿರಸ್ಕೃತ ಹಾಗೂ 8 ಅಭ್ಯರ್ಥಿಗಳು ಕಣದಿಂದ ಹಿಂದೆ ಸರಿದ ಕಾರಣ ಗುಜರಾತ್‌ನ ಸೂರತ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಲೋಕಸಭೆಗೆ ಆಯ್ಕೆಯಾಗಿದ್ದಾರೆ’ ಎಂದು ಬಿಜೆಪಿ ಹೇಳಿದೆ.
ಈ ವಿಷಯವನ್ನು ಪಕ್ಷದ ಗುಜರಾತ್ ರಾಜ್ಯ ಘಟಕದ ಅಧ್ಯಕ್ಷ ಸಿ.ಆರ್.ಪಾಟೀಲ ಅವರು ಸೋಮವಾರ ಎಕ್ಸ್ ಖಾತೆಯಲ್ಲಿ ತಿಳಿಸಿದ್ದು, ‘ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೊದಲ ಕಮಲವನ್ನು ಉಡುಗೊರೆಯಾಗಿ ಸೂರತ್ ನೀಡಿದೆ. ಅವಿರೋಧವಾಗಿ ಆಯ್ಕೆಯಾದ ನಮ್ಮ ಪಕ್ಷದ ಅಭ್ಯರ್ಥಿ ಮುಕೇಶ್ ಅವರಿಗೆ ಅಭಿನಂದನೆಗಳು’ ಎಂದು ಎಕ್ಸ್ ವೇದಿಕೆಯಲ್ಲಿ ಹೇಳಿದ್ದಾರೆ.
ನಾಮಪತ್ರ ಹಿಂಪಡೆಯಲು ಸೋಮವಾರ ಕೊನೆಯ ದಿನವಾಗಿತ್ತು. ಕಾಂಗ್ರೆಸ್ ಮತ್ತು ಬಿಜೆಪಿ ಹೊರತುಪಡಿಸಿದರೆ, 8 ಸ್ವತಂತ್ರ ಅಭ್ಯರ್ಥಿಗಳು ಕಣದಲ್ಲಿದ್ದರು. ಅವರೆಲ್ಲರೂ ತಮ್ಮ ನಾಮಪತ್ರ ಹಿಂಪಡೆದಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರ ನಾಮಪತ್ರ ತಿರಸ್ಕೃತಗೊಂಡಿದೆ. ಇವರ ನಾಮಪತ್ರ ತಿರಸ್ಕಾರಕ್ಕೆ ಸೂಚಕರ ಸಹಿಯಲ್ಲಿನ ವ್ಯತ್ಯಾಸವೇ ಕಾರಣ. ಇದರೊಂದಿಗೆ ಕಾಂಗ್ರೆಸ್‌ನ ಬದಲಿ ಅಭ್ಯರ್ಥಿ ಸುರೇಶ್ ಪಡಸಾಲ ಅವರ ನಾಮಪತ್ರವೂ ಅಸಿಂಧುಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.