ಲಖನೌ/ಅಯೋಧ್ಯೆ: ಕರ್ನಾಟಕದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಕಾಂಗ್ರೆಸ್ ಸರ್ಕಾರ ಏಕೆ ಕ್ರಮ ಜರುಗಿಸುತ್ತಿಲ್ಲ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಪ್ರಶ್ನಿಸಿದ್ದಾರೆ.
‘ಅವರು ಕುಟುಂಬ ಅಥವಾ ಪಕ್ಷವನ್ನು ಪರಿಗಣಿಸದೇ ಕಠಿಣ ಕ್ರಮ ಜರುಗಿಸಬೇಕು. ಪ್ರಜ್ವಲ್ ರೇವಣ್ಣನನ್ನು ಬಂಧಿಸಲು ಇನ್ನೂ ಏಕೆ ಕ್ರಮ ಕೈಗೊಂಡಿಲ್ಲ ಎಂದು ರಾಹುಲ್ ಗಾಂಧಿ ಅವರನ್ನು ಪ್ರಶ್ನಿಸುತ್ತೇನೆ. ಕರ್ನಾಟಕಕ್ಕೆ ಸೇರಿರುವ, ಅವರ ಪಕ್ಷವೇ ಆಡಳಿತ ನಡೆಸುತ್ತಿರುವುದರಿಂದ ಮಲ್ಲಿಕಾರ್ಜುನ ಖರ್ಗೆ ಅವರನ್ನೂ ನಾನು ಪ್ರಶ್ನಿಸುತ್ತೇನೆ’ ಎಂದಿದ್ದಾರೆ.
ಪಕ್ಷದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅವರು ಉತ್ತರ ಪ್ರದೇಶಕ್ಕೆ ಬಂದಿದ್ದಾರೆ.
ಇದೇ ವೇಳೆ ಅವರು ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ಎಲ್ಲ ತಂತ್ರಗಳನ್ನೂ ಬಳಸುತ್ತಿದೆ ಎಂದು ವಾಗ್ದಾಳಿ ನಡೆಸಿದರು. ‘ಭಯ, ಗೊಂದಲ, ವದಂತಿ ಮತ್ತು ಈಗ ಡೀಪ್‌ಫೇಕ್... ಹೀಗೆ, ವಿದೇಶಿ ಶಕ್ತಿಗಳು ಯಾವುದೇ ದೇಶವನ್ನು ಅಸ್ಥಿರಗೊಳಿಸಲು ಬಳಸುವಂಥ ಎಲ್ಲ ರೀತಿಯ ತಂತ್ರಗಳನ್ನೂ ಕಾಂಗ್ರೆಸ್ ಪ್ರಚಾರಕ್ಕೆ ಬಳಸುತ್ತಿದೆ’ ಎಂದು ಆರೋಪಿಸಿದರು.
ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎನ್ನುವ ಕಾಂಗ್ರೆಸ್ ಆರೋಪವನ್ನು ನಿರಾಕರಿಸಿದ ಅವರು, ‘ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ತುರ್ತು ಪರಿಸ್ಥಿತಿಯನ್ನು ಹೇರುವ ಮೂಲಕ ಪ್ರಜಾಪ್ರಭುತ್ವವನ್ನು ನಿರ್ನಾಮ ಮಾಡಲಾಗಿತ್ತು’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.