ADVERTISEMENT

ಉತ್ತರ ಪ್ರದೇಶ: ರಾಹುಲ್‌ ಗಾಂಧಿಗೆ 1.5ಲಕ್ಷ; PM ಮೋದಿಗೆ 60 ಸಾವಿರ ಮತಗಳ ಮುನ್ನಡೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಜೂನ್ 2024, 5:36 IST
Last Updated 4 ಜೂನ್ 2024, 5:36 IST
<div class="paragraphs"><p>ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿ</p></div>

ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿ

   

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಅತ್ಯಂತ ಮಹತ್ವದ ಪ್ರಭಾವ ಬೀರುವ ಉತ್ತರ ಪ್ರದೇಶ ರಾಜ್ಯದ ಕ್ಷೇತ್ರಗಳಲ್ಲಿ ಈ ಬಾರಿ ಸಮಾಜವಾದಿ ಪಕ್ಷವು ಬಿಜೆಪಿಗೆ ಪ್ರಬಲ ಪೈಪೋಟಿ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ವಾರಾಣಸಿ ಕ್ಷೇತ್ರದಿಂದ, ರಾಹುಲ್ ರಾಯ್‌ಬರೇಲಿಯಿಂದ ಹಾಗೂ ಸ್ಮೃತಿ ಇರಾನಿ ಅಮೇಠಿಯಿಂದ ಸ್ಪರ್ಧಿಸಿದ್ದಾರೆ. ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್‌ ಮತ್ತು ಅವರ ಪತ್ನಿ ಡಿಂಪಲ್ ಯಾದವ್ ಅವರೂ ಉತ್ತರ ಪ್ರದೇಶದಿಂದ ಸ್ಪರ್ಧಿಸಿದ್ದಾರೆ.

ADVERTISEMENT

ಪ್ರಧಾನಿ ನರೇಂದ್ರ ಮೋದಿ ಅವರು ಬಾಲರಾಮನ ಪ್ರಾಣಪ್ರತಿಷ್ಠಾಪನೆ ವಿಚಾರವಾಗಿ ದೇಶವ್ಯಾಪಿ ಮತಯಾಚಿಸಿದ್ದರು. ಅಯೋಧ್ಯೆಯನ್ನು ಒಳಗೊಂಡ ಫೈಝಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ಹಿನ್ನಡೆ ಅನುಭವಿಸಿದೆ. ಇಲ್ಲಿ ಸಮಾಜವಾದಿ ಪಕ್ಷದ ಅವದೇಶ್ ಪ್ರಸಾದ್ 7 ಸಾವಿರ ಅಲ್ಪ ಮತಗಳ ಅಂತರದಲ್ಲಿ ಬಿಜೆಪಿಯ ಲಾಲೂ ಸಿಂಗ್ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ. ಅಮೇಠಿಯಲ್ಲಿ ಬಿಜೆಪಿಯ ಸ್ಮೃತಿ ಇರಾನಿ ಹಿನ್ನಡೆ ಅನುಭವಿಸಿದ್ದಾರೆ.

ಬಿಜೆಪಿ ಕಳೆದ ಮೂರು ಬಾರಿ ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಿತ್ತು. ರಾಷ್ಟ್ರೀಯವಾದ ಹಾಗೂ ಹಿಂದೂ ಸಾಂಸ್ಕೃತಿಕ ಪರಂಪರೆಯನ್ನೇ ಮುಂದಿಟ್ಟುಕೊಂಡು ಬಿಜೆಪಿ ಮತ ಯಾಚಿಸಿತ್ತು. ಈ ಕ್ಷೇತ್ರದ ಜತೆಗೆ ಉತ್ತರ ಪ್ರದೇಶದ 36 ಕ್ಷೇತ್ರಗಳಲ್ಲಿ ಸಮಾಜವಾದಿ ಪಾರ್ಟಿ ಮುನ್ನಡೆ ಕಾಯ್ದುಕೊಂಡಿದೆ. ಅಖಿಲೇಶ್ ಯಾದವ್ ಹಾಗೂ ಅವರ ಪತ್ನಿ ಡಿಂಪಲ್ ಯಾದವ್ ಕೂಡಾ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್‌ ಮುಖಂಡ ರಾಹುಲ್ ಗಾಂಧಿ ಅವರು ರಾಯ್‌ಬರೇಲಿಯಿಂದ 1.5ಲಕ್ಷ ಮತಗಳ ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 60 ಸಾವಿರ ಮತಗಳ ಅಂತರದ ಮುನ್ನಡೆ ಕಾಯ್ದುಕೊಂಡಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.