ಧಾರಾಶಿವ (ಮಹಾರಾಷ್ಟ್ರ): ‘ಬಿಜೆಪಿ ನೇತೃತ್ವದ ಸರ್ಕಾರದ ಸಾಧನೆಯನ್ನು ಸಹಿಸದ ವಿರೋಧಿಗಳು, ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ನಕಲಿ ವಿಡಿಯೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡುತ್ತಿದ್ದಾರೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಚುನಾವಣಾ ರ‍್ಯಾಲಿಯನ್ನು ಉದ್ದೇಶಿಸಿ ಮಂಗಳವಾರ ಮಾತನಾಡಿದ ಅವರು, ‘ಇದೀಗ ಅವರ ಸುಳ್ಳುಗಳೂ ಕೆಲಸ ಮಾಡದ ಸ್ಥಿತಿಗೆ ತಲುಪಿವೆ. ಹೀಗಾಗಿ ಕೃತಕ ಬುದ್ಧಿಮತ್ತೆ ಬಳಸಿ, ನನ್ನ ಮುಖಕ್ಕೆ ಬೇರೆ ಯಾವುದೋ ಧ್ವನಿ ಸೇರಿಸಿ ನಕಲಿ ವಿಡಿಯೊಗಳನ್ನು ತಯಾರು ಮಾಡುತ್ತಿದ್ದಾರೆ. ಅದನ್ನು ‘ಪ್ರೀತಿಯ ಅಂಗಡಿ’ಯಲ್ಲಿಟ್ಟು ಮಾರಾಟ ಮಾಡುತ್ತಿದ್ದಾರೆ. ಇಂಥ ಅಂಗಡಿಯ ಬಾಗಿಲು ಮುಚ್ಚಬೇಕು’ ಎಂದಿದ್ದಾರೆ.
‘ಭಾರತದ ಸಿರಿಧಾನ್ಯವನ್ನು ಜಗತ್ತಿಗೆ ಪರಿಚಯಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ. ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಭಾರತಕ್ಕೆ ಭೇಟಿ ನೀಡಿದಾಗ ಉಣಬಡಿಸಿದ ಖಾದ್ಯಗಳಲ್ಲಿ ಸಿರಿಧಾನ್ಯ ಭರಿತ ಆಹಾರವೇ ಇರುವಂತೆ ನೋಡಿಕೊಳ್ಳಲಾಗಿತ್ತು. ಎಣ್ಣೆ ಕಾಳುಗಳ ಉತ್ಪಾದನೆಯಲ್ಲಿ ಭಾರತ ಸ್ವಾವಲಂಬಿ ಸಾಧಿಸಬೇಕು ಎಂಬುದು ನಮ್ಮ ಸರ್ಕಾರದ ಉದ್ದೇಶ’ ಎಂದು ಮೋದಿ ಹೇಳಿದರು.
‘ಸದ್ಯ ನಡೆಯುತ್ತಿರುವ ಲೋಕಸಭಾ ಚುನಾವಣೆಯು ಆತ್ಮ ಸಮ್ಮಾನದ್ದಾಗಿದೆ. ವಿರೋಧ ಪಕ್ಷಗಳ ಇಂಡಿ ಒಕ್ಕೂಟವು ಅಧಿಕಾರಕ್ಕೆ ಬಂದರೆ ಐದು ವರ್ಷಗಳಲ್ಲಿ ಐವರು ಪ್ರಧಾನಿಗಳಾಗುತ್ತಾರೆ. ಯಾವುದೇ ಕ್ಷಣದಲ್ಲಿ ಕುಸಿಯಬಹುದಾದ ದುರ್ಬಲ ಸರ್ಕಾರದಿಂದ ಬಲಿಷ್ಠ ರಾಷ್ಟ್ರ ನಿರ್ಮಾಣ ಸಾಧ್ಯವಿಲ್ಲ’ ಎಂದು ಪ್ರಧಾನಿ ಮೋದಿ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.