ನವದೆಹಲಿ: ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ಸತತ ಮೂರನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಲಿರುವ ಸಮಾರಂಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಲಿದ್ದಾರೆ ಎಂದು ವರದಿಯಾಗಿದೆ.
ಪಕ್ಷದ ನಾಯಕರು ಹಾಗೂ 'ಇಂಡಿಯಾ' ಮೈತ್ರಿಕೂಟದ ಮಿತ್ರ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಎಎನ್‌ಐ ವರದಿ ಮಾಡಿದೆ.
ಬಿಜೆಪಿ ನಾಯಕ ಪ್ರಲ್ಹಾದ ಜೋಶಿ ಅವರು ಖರ್ಗೆ ಅವರಿಗೆ ಶನಿವಾರ ರಾತ್ರಿ ಕರೆ ಮಾಡಿ, ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ ಎಂದು ವರದಿಯಾಗಿತ್ತು. ಅಲ್ಲಿಯವರೆಗೆ 'ಇಂಡಿಯಾ' ಕೂಟದ ಯಾವುದೇ ನಾಯಕರಿಗೆ ಪ್ರಮಾಣವಚನ ಸಮಾರಂಭಕ್ಕೆ ಆಹ್ವಾನ ಬಂದಿರಲಿಲ್ಲ.
ತಾವು ಸಮಾರಂಭಕ್ಕೆ ಹೋಗುವುದಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ಇಂದು ರಾತ್ರಿ ನಡೆಯಲಿರುವ ಸಮಾರಂಭದಲ್ಲಿ ಮೋದಿ ಅವರು (ರಾತ್ರಿ 7.15ಕ್ಕೆ) ಪ್ರಮಾಣ ಸ್ವೀಕರಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.