ಮಹಾರಾಜ್‌ಗಂಜ್ (ಉ.ಪ್ರದೇಶ): ನರೇಂದ್ರ ಮೋದಿ ಮತ್ತೆ ಪ್ರಧಾನಿಯಾದರೆ ದೇಶದಲ್ಲಿ ಮುಂದೆ ಚುನಾವಣೆಗಳೇ ನಡೆಯುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಆರೋಪಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ವೀರೇಂದ್ರ ಚೌಧರಿ ಪರ ಪ್ರಚಾರ ನಡೆಸಿದ ಅವರು, ಪ್ರಧಾನಿ ಮೋದಿ ನೀಡಿರುವ ಭರವಸೆಗಳನ್ನು ಈಡೇರಿಸಿಲ್ಲ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.
'ಪ್ರಧಾನಿ ಮೋದಿ ಒಬ್ಬ ಮಹಾನ್ ಸುಳ್ಳುಗಾರ. ಸುಳ್ಳುಗಳನ್ನೇ ಹೇಳುತ್ತಾರೆ. ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ಚುನಾವಣೆಗಳೇ ನಡೆಯುವುದಿಲ್ಲ. ದಲಿತರು, ಆದಿವಾಸಿಗಳು, ಹಿಂದುಳಿದ ವರ್ಗಗಳು ಅಥವಾ ಮಹಿಳಾ ಅಭ್ಯರ್ಥಿಗಳೇ ಇರುವುದಿಲ್ಲ' ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ಈ ಬಾರಿಯ ಚುನಾವಣೆಯನ್ನು ಸೈದ್ಧಾಂತಿಕ ಹೋರಾಟ ಎಂದು ಬಣ್ಣಿಸಿರುವ ಖರ್ಗೆ, 'ನಾವು ಯಾವುದೇ ವ್ಯಕ್ತಿ, ಮೋದಿ ಅಥವಾ ಯೋಗಿ ವಿರುದ್ಧ ಹೋರಾಡುತ್ತಿಲ್ಲ. ಇದು ವೈಯಕ್ತಿಕ ಹೋರಾಟವಲ್ಲ' ಎಂದು ಸ್ಪಷ್ಟಪಡಿಸಿದ್ದಾರೆ.
'70 ವರ್ಷಗಳಲ್ಲಿ ಏನು ಮಾಡಿದ್ದೀರಿ ಎಂದು ಅವರು (ಬಿಜೆಪಿ) ಕೇಳುತ್ತಾರೆ. ನಾವು ಏನನ್ನೂ ಮಾಡದಿದ್ದರೆ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ನೀವು ಪ್ರಧಾನಿಯಾಗಲು ಸಾಧ್ಯವಾಗುತ್ತಿರಲಿಲ್ಲ. ನಾವು ಸಂವಿಧಾನವನ್ನು ರಚಿಸಿ ಪ್ರಜಾಪ್ರಭುತ್ವವನ್ನು ಉಳಿಸಿದ್ದರಿಂದ ನೀವು ಪ್ರಧಾನಿಯಾಗಿದ್ದೀರಿ' ಎಂದು ಖರ್ಗೆ ತಿರುಗೇಟು ನೀಡಿದ್ದಾರೆ.
'ಪ್ರಜಾಪ್ರಭುತ್ವವನ್ನು ನಾಶಪಡಿಸಲು ಪ್ರಧಾನಿ ಪ್ರಯತ್ನಿಸುತ್ತಿದ್ದಾರೆ. ಹಾಗೇ ಆಗಲು ನಾವು ಬಿಡುವುದಿಲ್ಲ' ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.