ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ 'ಇಂಡಿಯಾ' ಮೈತ್ರಿಕೂಟ 295ಕ್ಕೂ ಅಧಿಕ ಸ್ಥಾನಗಳಲ್ಲಿ ಜಯ ಗಳಿಸಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಶನಿವಾರ ತಿಳಿಸಿದ್ದಾರೆ.
ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ 'ಇಂಡಿಯಾ' ಮೈತ್ರಿಕೂಟ ಪಕ್ಷಗಳ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಕೇಜ್ರಿವಾಲ್ ಪ್ರತಿಕ್ರಿಯೆ ನೀಡಿದ್ದಾರೆ.
'ಎಲ್ಲೆಡೆಯಿಂದ ಲಭಿಸಿದ ಪ್ರತಿಕ್ರಿಯೆ ಆಧಾರದಲ್ಲಿ 'ಇಂಡಿಯಾ' ಮೈತ್ರಿಕೂಟ 295ಕ್ಕೂ ಅಧಿಕ ಸ್ಥಾನಗಳನ್ನು ಗಳಿಸಲಿದೆ ಎಂದು ನಾವು ನಂಬಿದ್ದೇವೆ. ಬಿಜೆಪಿ ಸುಮಾರು 220 ಸ್ಥಾನಗಳನ್ನು ಪಡೆಯಬಹುದು. ಎನ್‌ಡಿಎ ಒಟ್ಟಾರೆಯಾಗಿ 235 ಸ್ಥಾನಗಳನ್ನು ಗಳಿಸಬಹುದು. ಕೇಂದ್ರದಲ್ಲಿ ಬಲಿಷ್ಠ ಸರ್ಕಾರ ರಚಿಸಲು 'ಇಂಡಿಯಾ' ಮೈತ್ರಿಕೂಟ ಒಗ್ಗಟ್ಟಾಗಿ ಮುನ್ನಡೆಯುತ್ತಿದೆ' ಎಂದು ಹೇಳಿದ್ದಾರೆ.
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಮಾರ್ಚ್ ತಿಂಗಳಲ್ಲಿ ಬಂಧಿತರಾಗಿದ್ದ ಕೇಜ್ರಿವಾಲ್ ಅವರಿಗೆ ಪ್ರಜಾತಂತ್ರದ ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಜೂನ್ 1ರವರೆಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಅಲ್ಲದೆ ಜೂನ್ 2, ಭಾನುವಾರದಂದು ಶರಣಾಗುವುದಾಗಿ ಕೇಜ್ರಿವಾಲ್ ಶುಕ್ರವಾರ ಹೇಳಿಕೆ ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.