ನಾಸಿಕ್: ಬಜೆಟ್‌ನ ಒಟ್ಟು ಮೊತ್ತದಲ್ಲಿ ಶೇ 15ರಷ್ಟನ್ನು ಮುಸ್ಲಿಮರಿಗೆ ಮೀಸಲಿಡಲು ಕಾಂಗ್ರೆಸ್ ಪಕ್ಷ ಬಯಸಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿರುವುದು ಮೂರ್ಖತನವೇ ಸರಿ ಎಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ–ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ. ಜಾತಿ, ಧರ್ಮದ ಆಧಾರದ ಮೇಲೆ ಬಜೆಟ್ ಹಂಚಿಕೆ ಯಾವಾಗಲೂ ಆಗಿಲ್ಲ ಎಂದು ತಿಳಿಸಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶರದ್, ಕೇಂದ್ರ ಸರ್ಕಾರದ ಬಜೆಟ್ ಇಡೀ ದೇಶಕ್ಕೆ ಸಂಬಂಧಿಸಿದ್ದೇ ಹೊರತು ಯಾವುದೇ ಧರ್ಮ ಅಥವಾ ಜಾತಿಗಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಕಲ್ಯಾಣ್‌ನಲ್ಲಿ ಬುಧವಾರ ಚುನಾವಣಾ ಪ್ರಚಾರ ನಡೆಸಿದ್ದ ಮೋದಿ, ಕಾಂಗ್ರೆಸ್ ಪಕ್ಷವು ಧರ್ಮದ ಆಧಾರದ ಮೇಲೆ ಜನರನ್ನು ವಿಭಜಿಸುತ್ತಿದೆ ಎಂದು ಆರೋಪಿಸಿದ್ದರು.
'ನನಗಿಂತ ಮೊದಲು ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರು ದೇಶದ ಸಂಪನ್ಮೂಲಗಳ ಮೇಲೆ ಮುಸ್ಲಿಮರಿಗೆ ಮೊದಲ ಹಕ್ಕು ಇದೆ ಎಂದು ಹೇಳಿದ್ದರು. ಕಾಂಗ್ರೆಸ್ ಪಕ್ಷವು ಕೇಂದ್ರ ಬಜೆಟ್‌ನಲ್ಲಿ ಶೇ 15ರಷ್ಟು ಮೊತ್ತವನ್ನು ಮುಸ್ಲಿಮರಿಗೆ ಮೀಸಲಿಡಲು ಬಯಸಿತ್ತು. ಆ ಮೂಲಕ ದೇಶದ ಬಜೆಟ್ ಅನ್ನು ಮುಸ್ಲಿಂ ಬಜೆಟ್ ಮತ್ತು ಹಿಂದೂ ಬಜೆಟ್ ಎಂದು ವಿಂಗಡಿಸಲು ಹೊರಟಿತ್ತು. ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೇರಿದರೆ ಇಂತಹ ಓಲೈಕೆ ನೀತಿಯನ್ನು ಜಾರಿಗೊಳಿಸಲಿದೆ. ದೇಶದ ಐಕ್ಯತೆಯೇ ನನಗೆ ಮುಖ್ಯ' ಎಂದು ಪ್ರತಿಪಾದಿಸಿದ್ದರು.
ಮೋದಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಶರದ್, ಇಂತಹ ಹೇಳಿಕೆಗಳನ್ನು ನೀಡುವುದು ಮೂರ್ಖತನ ಎಂದು ಕಿಡಿಕಾರಿದ್ದಾರೆ.
ಮೋದಿ ಅವರು ಬಳಸಿದ್ದ 'ವೋಟ್ ಜಿಹಾದ್' ಹೇಳಿಕೆ ಸಂಬಂಧ ಕೇಳಿದ ಪ್ರಶ್ನೆಗೆ ಉತ್ತರಿಸಿದ ಶರದ್, 'ಮೋದಿ ಅವರು ಇತ್ತೀಚಿನ ದಿನಗಳಲ್ಲಿ ನೀಡುತ್ತಿರುವ ಹೇಳಿಕೆಗಳಲ್ಲಿ ಕನಿಷ್ಠ ಶೇಕಡ ಒಂದರಷ್ಟೂ ಸತ್ಯ ಇರುವುದಿಲ್ಲ. ಅವರು ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ಕಳೆದುಕೊಂಡಿದ್ದಾರೆ' ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.