ವಯನಾಡ್: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕೆ ಇಳಿದಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್‌ನ (ಐಯುಎಂಎಲ್) ಬೆಂಬಲದ ಬಗ್ಗೆ ಮುಜುಗರಕ್ಕೆ ಒಳಗಾಗಿದ್ದಾರೆ. ಹಾಗಾಗಿ ವಯನಾಡ್ ರೋಡ್ ಶೋ ವೇಳೆ ಮುಸ್ಲಿಂ ಲೀಗ್‌ನ ಧ್ವಜ ಪ್ರದರ್ಶಿಸಿರಲಿಲ್ಲ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಆರೋಪಿಸಿದ್ದಾರೆ.
ರಾಹುಲ್ ಗಾಂಧಿ ಅವರು ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಬುಧವಾರ ನಾಮಪತ್ರ ಸಲ್ಲಿಸಿದ್ದರು.
ರಾಹುಲ್ ಗಾಂಧಿ, ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‌ಐ) ಜತೆ ಸಂಪರ್ಕ ಹೊಂದಿರುವ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ (ಎಸ್‌ಡಿಪಿಐ) ಬೆಂಬಲ ಪಡೆದಿರುವುದಾಗಿ ಆರೋಪಿಸಿರುವ ಸ್ಮೃತಿ ಇರಾನಿ, ಇದು ನಿಜಕ್ಕೂ ಆಘಾತವನ್ನುಂಟು ಮಾಡಿದೆ. ಆ ಮೂಲಕ ನಾಮಪತ್ರ ಸಲ್ಲಿಕೆ ವೇಳೆ ಮಾಡಿದ ಪ್ರತಿಜ್ಞೆಯನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದಾರೆ.
'ಇಂಡಿಯಾ' ಮೈತ್ರಿಕೂಟದ ವಿರುದ್ಧವೂ ವಾಗ್ದಾಳಿ ನಡೆಸಿರುವ ಸ್ಮೃತಿ ಇರಾನಿ, ವಿರೋಧ ಪಕ್ಷಗಳಿಗೆ ಪ್ರಧಾನಿ ಸ್ಥಾನಕ್ಕೆ ಸೂಕ್ತ ನಾಯಕರೇ ಇಲ್ಲ. ದೇಶದ ಜನತೆಯ ಲೂಟಿ ಮಾಡುವುದೇ ಪ್ರಮುಖ ಉದ್ದೇಶವಾಗಿದೆ ಎಂದು ಟೀಕಿಸಿದ್ದಾರೆ.
ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ವಿರುದ್ಧ ಕೇರಳದ ಬಿಜೆಪಿ ಘಟಕದ ಅಧ್ಯಕ್ಷ ಕೆ.ಸುರೇಂದ್ರನ್ ಕಣಕ್ಕಿಳಿದಿದ್ದಾರೆ. ಅವರು ಇಂದು ನಾಮಪತ್ರ ಸಲ್ಲಿಸಿದರು. ಈ ವೇಳೆ ಸ್ಮೃತಿ ಇರಾನಿ ಉಪಸ್ಥಿತರಿದ್ದರು.
2019ರಲ್ಲಿ ಅಮೇಠಿ ಲೋಕಸಭಾ ಕ್ಷೇತ್ರದಲ್ಲಿ ಸ್ಮೃತಿ ಇರಾನಿ ವಿರುದ್ಧ ರಾಹುಲ್ ಗಾಂಧಿ ಪರಾಭವಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.