ಚೆನ್ನೈ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬರುತ್ತದೆ ಎಂದು ತಮಿಳುನಾಡು ಮುಖ್ಯಮಂತ್ರಿ, ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಅವರು ಹಗಲುಗನಸು ಕಾಣುತ್ತಿದ್ದಾರೆ ಎಂದು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ.ಪಳನಿಸ್ವಾಮಿ ವ್ಯಂಗ್ಯವಾಡಿದ್ದಾರೆ.
ಶ್ರೀಪೆರಂಬದೂರು ಲೋಕಸಭಾ ಕ್ಷೇತ್ರದ ಎಐಎಡಿಎಂಕೆ ಅಭ್ಯರ್ಥಿ ಡಾ. ಜಿ. ಪ್ರೇಮಕುಮಾರ್ ಪರ ಪ್ರಚಾರ ನಡೆಸಿದರು. ಇದೇ ವೇಳೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಬಳಿಕ ‘ಇಂಡಿಯಾ’ ಮೈತ್ರಿಕೂಟದ ಸರ್ಕಾರ ರಚನೆಯಾಗುತ್ತದೆ ಎಂಬ ಕನಸು ಎಂದಿಗೂ ಸಾಕಾರಗೊಳ್ಳುವುದಿಲ್ಲ. ಇದಕ್ಕೆ ಕಾರಣ ಮೈತ್ರಿಕೂಟದ ನಾಯಕರಲ್ಲಿ ಒಗ್ಗಟ್ಟು ಇಲ್ಲ ಎಂದು ಕುಟುಕಿದ್ದಾರೆ.
ಮೈತ್ರಿಯನ್ನು ಘೋಷಿಸಿದ ನಂತರ ಮೈತ್ರಿಕೂಟದ ನಾಯಕರು ಒಬ್ಬರಾದ ಮೇಲೆ ಒಬ್ಬರು ಹೊರನಡೆದಿದ್ದಾರೆ. ನಾಯಕರನ್ನು ಒಂದುಗೂಡಿಸುವ ಯಾವುದೇ ಪ್ರಯತ್ನ ನಡೆದಿಲ್ಲ ಎಂದು ಗುಡುಗಿದ್ದಾರೆ.
‘ಅಭಿವೃದ್ಧಿಯಲ್ಲಿ ತಮಿಳುನಾಡು ದೇಶದಲ್ಲೇ ಮುಂಚೂಣಿಯಲ್ಲಿರುವ ರಾಜ್ಯ ಎಂದು ಸ್ಟಾಲಿನ್ ಹೇಳಿಕೊಂಡಿದ್ದಾರೆ. ಆದರೆ, ಭ್ರಷ್ಟಾಚಾರ, ಡ್ರಗ್ಸ್ ದಂಧೆ ವ್ಯಾಪಕವಾಗಿ ನಡೆಯುತ್ತಿದೆ. ಮುಖ್ಯಮಂತ್ರಿಯಾಗಿ ಸ್ಟಾಲಿನ್ ಅವರು ರಾಜ್ಯಕ್ಕೆ ಯಾವುದೇ ಪ್ರಮುಖ ಯೋಜನೆಗಳನ್ನು ತರುವಲ್ಲಿ ವಿಫಲರಾಗಿದ್ದಾರೆ. ಜತೆಗೆ ಡಿಎಂಕೆ ಹಾಲಿ ಸಂಸದ (ಶ್ರೀಪೆರಂಬದೂರು) ಟಿ.ಆರ್. ಬಾಲು ಕೂಡ ಕ್ಷೇತ್ರದ ಅಭಿವೃದ್ಧಿಗೆ ಏನನ್ನೂ ಮಾಡಿಲ್ಲ’ ಎಂದು ಆರೋಪಿಸಿದ್ದಾರೆ.
‘ರಾಜ್ಯದಲ್ಲಿ ಎಐಎಡಿಎಂಕೆ ಆಡಳಿತದ ದಶಕವು ಸುವರ್ಣ ಯುಗವಾಗಿತ್ತು. ಮಾಜಿ ಸಿಎಂ ಜೆ. ಜಯಲಲಿತಾ ಅವರು ಜಾರಿಗೆ ತಂದ ಅನೇಕ ಯೋಜನೆಗಳು ಮತ್ತು ಕಲ್ಯಾಣ ಕಾರ್ಯಕ್ರಮಗಳು ಇಂದಿಗೂ ಪ್ರಸ್ತುತ’ ಎಂದು ಪಳನಿಸ್ವಾಮಿ ಕೊಂಡಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.