ಬೆಂಗಳೂರು: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಬಂಡಾಯದ ಬಿಸಿ ಎದುರಾಗಿದ್ದು, ಈ ಕ್ಷೇತ್ರದಿಂದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಖಂಡ ಬರ್ತಲೋಮಿಯೊ ಅವರು ನಿರ್ಧರಿಸಿದ್ದಾರೆ.
‘ಕಳೆದ 30 ವರ್ಷಗಳಿಂದ ಕಾಂಗ್ರೆಸ್‌ನಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದು, ನನ್ನನ್ನು ಅಭ್ಯರ್ಥಿಯಾಗಿ ಪರಿಗಣಿಸಬೇಕು ಎಂದು ಸೋನಿಯಾ ಗಾಂಧಿ ಸೇರಿದಂತೆ ಪಕ್ಷದ ಹಲವು ಮುಖಂಡರಿಗೆ ಮನವಿ ಮಾಡಿದ್ದೆ. ಆದರೂ ನನ್ನ ಹೆಸರು ಪರಿಗಣಿಸಿಲ್ಲ. ಆದ್ದರಿಂದ, ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ’ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾಹಿತಿ ನೀಡಿದರು.
‘ಕ್ರಿಶ್ಚಿಯನ್ ಸಮುದಾಯದವರು ತಾಳ್ಮೆ, ಶಾಂತಿ ಮತ್ತು ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ. ಎಲ್ಲ ಧರ್ಮದವರ ಜೊತೆಯಲ್ಲೂ ಸೌಹಾರ್ದವಾಗಿ ಜೀವನ ಸಾಗಿಸುತ್ತಿದ್ದಾರೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಕ್ರೈಸ್ತ ಸಮುದಾಯದವರು ಕಾಂಗ್ರೆಸ್ ಅನ್ನು ಬೆಂಬಲಿಸುತ್ತಾ ಬರುತ್ತಿದ್ದಾರೆ. ಆದರೂ 28 ಲೋಕಸಭಾ ಕ್ಷೇತ್ರಗಳಲ್ಲಿ ಕ್ರೈಸ್ತ ಸಮುದಾಯದ ಒಬ್ಬರಿಗೂ ಟಿಕೆಟ್ ನೀಡಿಲ್ಲ. ಇದು ಸಮುದಾಯಕ್ಕೆ ಬೇಸರ ತರಿಸಿದೆ’ ಎಂದು ಹೇಳಿದರು.
‘ಕ್ರಿಶ್ಚಯನ್ ಸಮುದಾಯವನ್ನು ಕಾಂಗ್ರೆಸ್ ಕಡೆಗಣಿಸಿದೆ. ನಾನು ಸ್ಪರ್ಧೆಯ ನಿರ್ಧಾರದಿಂದ ಹಿಂದಕ್ಕೆ ಸರಿಯುವುದಿಲ್ಲ. ನನ್ನ ಈ ಹೋರಾಟಕ್ಕೆ ಎಲ್ಲ ಜಾತಿ, ಧರ್ಮದವರು ಬೆಂಬಲ ಹಾಗೂ ಸಹಕಾರ ನೀಡುವ ವಿಶ್ವಾಸವಿದೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.