ಕೊಪ್ಪಳ: ಲೋಕಸಭಾ ಚುನಾವಣೆಯ ಕೊಪ್ಪಳ ಕ್ಷೇತ್ರದ ತಮ್ಮ ಪಕ್ಷದ ಅಭ್ಯರ್ಥಿ ಕೆ. ರಾಜಶೇಖರ ಹಿಟ್ನಾಳ ಪರ ಪ್ರಚಾರ ಮಾಡುವ ಸಮಯದಲ್ಲಿ ಪ್ರಚೋದನಕಾರಿಯಾಗಿ ಹೇಳಿಕೆ ನೀಡಿದ ಕಾರಣಕ್ಕಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಜಿಲ್ಲೆಯ ಕಾರಟಗಿ ಪೊಲೀಸ್ ಠಾಣೆಯಲ್ಲಿ ಮಂಗಳವಾರ ದೂರು ದಾಖಲಾಗಿದೆ.
‘ಶಿವರಾಜ ತಂಗಡಗಿ ತಮ್ಮ ಭಾಷಣದಲ್ಲಿ ಪ್ರಚೋದನಕಾರಿಯಾಗಿ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು’ ಎಂದು ಕಾರಟಗಿಯಲ್ಲಿ ಚುನಾವಣಾಧಿಕಾರಿಯಾಗಿ ಕೆಲಸ ಮಾಡುತ್ತಿರುವ ಗಂಗಾವತಿ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿ ಗ್ಯಾನನಗೌಡ ನಂದನಗೌಡ ದೂರು ನೀಡಿದ್ದಾರೆ.
ಭಾನುವಾರ (ಮಾ. 24) ಕಾರಟಗಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಂಗಡಗಿ ‘ಯುವಕರಿಗೆ ಎರಡು ಕೋಟಿ ಉದ್ಯೋಗ ಕೊಡುವುದಾಗಿ ಹೇಳಿ ಪ್ರಧಾನಿ ನರೇಂದ್ರ ಮೋದಿ ಮಾತು ತಪ್ಪಿದ್ದಾರೆ. ಉದ್ಯೋಗ ಕೊಡಿ ಎಂದು ಕೇಳಿದರೆ ಪಕೋಡಾ ಮಾರಲು ಹೋಗಿ ಎಂದಿದ್ದಾರೆ. ಈಗಲೂ ಯುವಕರು ಹಾಗೂ ವಿದ್ಯಾರ್ಥಿಗಳು ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡೆಯಬೇಕು’ ಎನ್ನುವ ಹೇಳಿಕೆ ನೀಡಿದ್ದರು. ಇದು ಬಿಜೆಪಿಗರ ಆಕ್ರೋಶಕ್ಕೂ ಕಾರಣವಾಗಿದೆ.
ಇಂದು ಪ್ರತಿಭಟನೆ: ತಂಗಡಗಿ ಹೇಳಿಕೆ ಖಂಡಿಸಿ ಪಕ್ಷದ ಕಾರ್ಯಕರ್ತರು ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ಮಂಗಳವಾರ ಕಾರಟಗಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಕ್ಷೇತ್ರದ ಮಾಜಿ ಶಾಸಕ ಬಸವರಾಜ ದಢೇಸೂಗೂರು ಕಚೇರಿಯಿಂದ ಆರಂಭವಾಗಲಿರುವ ಪ್ರತಿಭಟನಾ ಮೆರವಣಿಗೆ ಕನಕದಾಸ ವೃತ್ತದ ತನಕ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.