ನವದೆಹಲಿ: ಕೋಲಾರದ ಬಿಜೆಪಿ ಸಂಸದ ಎಸ್.ಮುನಿಸ್ವಾಮಿ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರನ್ನು ಇಲ್ಲಿ ಭೇಟಿ ಮಾಡಿ ಕೋಲಾರ ಕ್ಷೇತ್ರದಿಂದ ಬಿಜೆಪಿ ಅಥವಾ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ.
ನಡ್ಡಾ ಅವರನ್ನು ಮುನಿಸ್ವಾಮಿ ಶುಕ್ರವಾರ ಭೇಟಿ ಮಾಡಿ ಕೋಲಾರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡ ಬಾರದು ಎಂದು ಮನವಿ ಮಾಡಿದರು. ಈ ಬಗ್ಗೆ ಯಾವುದೇ ಭರವಸೆ ನೀಡಲು ನಡ್ಡಾ ನಿರಾಕರಿಸಿದರು ಎಂದು ಮೂಲಗಳು ತಿಳಿಸಿವೆ.
ಎಚ್.ಡಿ.ದೇವೇಗೌಡ ಅವರನ್ನು ಮುನಿಸ್ವಾಮಿ ಶನಿವಾರ ಭೇಟಿ ಮಾಡಿ ತಮ್ಮನ್ನೇ ಅಭ್ಯರ್ಥಿಯನ್ನಾಗಿ ಪರಿಗಣಿಸುವಂತೆ ಕೋರಿದರು. ‘ನೀವು ಬಹಳ ತಡವಾಗಿ ಬಂದಿದ್ದೀರಿ. ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗಿದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚಿಸಿ’ ಎಂದು ದೇವೇಗೌಡರು ಸಲಹೆ ನೀಡಿದರು ಎಂದು ಮೂಲಗಳು ಹೇಳಿವೆ.
‘ಟಿಕೆಟ್ ವಿಚಾರವಾಗಿ ಚರ್ಚೆ ನಡೆಸಿಲ್ಲ. ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಲು ರಣತಂತ್ರ ರೂಪಿಸುವ ಬಗ್ಗೆ ಚರ್ಚಿಸಿದ್ದೇವೆ’ ಎಂದು ಮುನಿಸ್ವಾಮಿ ಸುದ್ದಿಗಾರರಿಗೆ ತಿಳಿಸಿದರು.
ಕೋಲಾರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲು ಬಿಜೆಪಿ ತೀರ್ಮಾನಿಸಿದೆ. ಹೀಗಾಗಿ, ಮುನಿಸ್ವಾಮಿ ಅವರಿಗೆ ಟಿಕೆಟ್ ಕೈತಪ್ಪಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.