ಭದ್ರಾವತಿ: ‘ಲೋಕಸಭಾ ಚುನಾವಣೆಯಲ್ಲಿ ಬಿ.ವೈ.ರಾಘವೇಂದ್ರ ಹಾಗೂ ನಾನು ಗೆದ್ದು, ಕೇಂದ್ರ ಸಚಿವರಾಗಿ ವಿಐಎಸ್‌ಎಲ್ ಕಾರ್ಖಾನೆಯನ್ನು ಶಾಶ್ವತವಾಗಿ ಉಳಿಸುತ್ತೇವೆ’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದರು.
ಹಳೇ ನಗರದ ಕನಕಾ ಮಂಟಪದಲ್ಲಿ ಸೋಮವಾರ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪರ ಮತಯಾಚನೆ ಸಭೆಯಲ್ಲಿ ಅವರು ಮಾತನಾಡಿದರು.
ಮುಂದಿನ ದಿನಗಳಲ್ಲಿ ದೇವೇಗೌಡರ ಮಾರ್ಗದರ್ಶನದಲ್ಲಿ ಮೋದಿ ಅವರ ಮನವೊಲಿಸಿ ಕಾರ್ಖಾನೆ ಉಳಿಸಲು ಶ್ರಮಿಸುವುದಾಗಿ ತಿಳಿಸಿದರು. ದೇಶದಲ್ಲಿಯೇ ಈ ಕ್ಷೇತ್ರಕ್ಕೆ ವಿಶೇಷ ಸ್ಥಾನವಿದೆ ಎಂದರು.
‘ಬಿ.ಎಸ್.ಯಡಿಯೂರಪ್ಪ ಮಾರ್ಗದರ್ಶನದಲ್ಲಿ ರಾಘವೇಂದ್ರ ಅವರು ಅನೇಕ ಅಭಿವೃದ್ಧಿ ಕಾರ್ಯಗಳನ್ನು ನಡೆಸಿದ್ದಾರೆ. ಹೊಸ ರೈಲ್ವೆ ಹಳಿ, ರಾಷ್ಟ್ರೀಯ ಹೆದ್ದಾರಿ, ಸೇತುವೆ ನಿರ್ಮಾಣ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ’ ಎಂದರು.
‘ಕಾಂಗ್ರೆಸ್‌ನವರು ಮನೆ ಬಾಗಿಲಿಗೆ ಮತಯಾಚನೆ ಮಾಡಲು ಬರುತ್ತಿದ್ದು, ಅವರ ಆಮಿಷಗಳಿಗೆ ಬಲಿಯಾಗಬೇಡಿ. ಅವರನ್ನು ಹಿಂತಿರುಗಿ ಓಡಿಸಿ’ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ತಿಳಿಸಿದರು.
ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಕರುಣ ಮೂರ್ತಿ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಚಂದ್ರೇಗೌಡ ಅವರು ಜೆಡಿಎಸ್ ಸೇರ್ಪಡೆಗೊಳ್ಳುತ್ತಿರುವುದಾಗಿ ಘೋಷಿಸಿದರು.
ಮುಖಂಡರಾದ ಶಾರದಾ ಅಪ್ಪಾಜಿ, ಧರ್ಮಣ್ಣ, ಚಂದ್ರಣ್ಣ, ಉಮೇಶ್, ಗೀತಾ, ಮಂಗೋಟೆ ರುದ್ರೇಶ್, ಧರ್ಮಪ್ರಸಾದ್, ಅಜಿತ್ ಅಪ್ಪಾಜಿ, ಮಂಜುಳಾ, ಆನಂದ್, ರಾಜು, ಕದಿರೇಶ್, ಉದಯ್ ಕುಮಾರ್, ರೇಖಾ, ಪ್ರಕಾಶ್, ರೂಪಾ, ಗುಣಶೇಖರ್, ಶಾರದಾ ಪೂರ್ವ ನಾಯ್ಕ, ಬೋಜೇಗೌಡ ಇನ್ನಿತರರು ಉಪಸ್ಥಿತರಿದ್ದರು.
ಕಾರ್ಯಕರ್ತರು ಕುಮಾರಸ್ವಾಮಿ ಅವರಿಗೆ ಜೆಸಿಬಿ ಮೂಲಕ ಬೃಹತ್ ಹೂವಿನ ಹಾರ ಹಾಕಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.