ಬೆಂಗಳೂರು: ಬೆಂಗಳೂರಿನ ನಾಲ್ಕು ಲೋಕಸಭಾ ಕ್ಷೇತ್ರಗಳು, ಚಿಕ್ಕಬಳ್ಳಾಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ಪ್ರಚಾರ ನಡೆಸಲಿದ್ದಾರೆ.
ರಾಜ್ಯದಲ್ಲಿ ಇದೇ 26ರಂದು 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. ಈಗಾಗಲೇ ಅವರು ಮೈಸೂರಿನಲ್ಲಿ ಸಾರ್ವಜನಿಕ ಸಭೆ ಮತ್ತು ಮಂಗಳೂರಿನಲ್ಲಿ ರೋಡ್ ಶೋ ನಡೆಸಿದ್ದಾರೆ.
ಚಿಕ್ಕಬಳ್ಳಾಪುರ ಮತ್ತು ಕೋಲಾರ ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ಚಿಕ್ಕಬಳ್ಳಾಪುರದಲ್ಲಿ ಮಧ್ಯಾಹ್ನ 3ಕ್ಕೆ, ಬೆಂಗಳೂರು ಉತ್ತರ, ದಕ್ಷಿಣ, ಕೇಂದ್ರ ಮತ್ತು ಗ್ರಾಮಾಂತರ ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ಬೆಂಗಳೂರು ಅರಮನೆ ಮೈದಾನದಲ್ಲಿ ಸಂಜೆ 5ಕ್ಕೆ ಸಾರ್ವಜನಿಕ ಸಭೆಗಳು ನಡೆಯಲಿವೆ.
‘ಬೆಂಗಳೂರು ಅರಮನೆ ಮೈದಾನದ ಕಾರ್ಯಕ್ರಮಕ್ಕೆ 60 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಸುಮಾರು ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಎಲ್ಲ ಕಡೆಗಳಲ್ಲೂ ವಿಶಾಲವಾದ ಎಲ್‌ಇಡಿ ಪರದೆಗಳನ್ನು ಅಳವಡಿಸಲಾಗುವುದು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಬಿಜೆಪಿ ಕಾರ್ಯಕರ್ತರಲ್ಲದೇ ಮೋದಿ ಅಭಿಮಾನಿಗಳನ್ನೂ ಈ ಕಾರ್ಯಕ್ರಮದಲ್ಲಿ ಸೇರಿಸುವ ಪ್ರಯತ್ನ ಕಳೆದ ಕೆಲವು ದಿನಗಳಿಂದ ನಡೆದಿದೆ. ಮೋದಿ ಬೆಂಬಲಿಗರಾದ ಅನಿವಾಸಿ ಭಾರತೀಯರೂ ಈ ಸಭೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಭಾಗವಹಿಸಲಿದ್ದಾರೆ. ಬೆಂಗಳೂರು ನಗರ ಮತ್ತು ಗ್ರಾಮಾಂತರದಿಂದ ಬರುವ ಕಾರ್ಯಕರ್ತರಿಗೆ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. 15 ಸಾವಿರ ವಿಶೇಷ ಆಹ್ವಾನಿತರಿಗೆ ಪಾಸ್ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.