ADVERTISEMENT

ಕಾಂಗ್ರೆಸ್ ಬಣ ರಾಜಕೀಯದ ಕಿತ್ತಾಟದ ಬಣ್ಣ ಶೀಘ್ರದಲ್ಲೇ ಬಯಲಿಗೆ ಬರಲಿದೆ: ವಿಜಯೇಂದ್ರ

​ಪ್ರಜಾವಾಣಿ ವಾರ್ತೆ
Published 15 ಮೇ 2024, 11:15 IST
Last Updated 15 ಮೇ 2024, 11:15 IST
<div class="paragraphs"><p>ಬಿ.ವೈ. ವಿಜಯೇಂದ್ರ</p></div>

ಬಿ.ವೈ. ವಿಜಯೇಂದ್ರ

   

ಬೆಂಗಳೂರು: ‘ನಿಮ್ಮ ಬಣ ರಾಜಕೀಯದ ಕಿತ್ತಾಟದ ಬಣ್ಣ ಶೀಘ್ರದಲ್ಲೇ ಬಯಲಿಗೆ ಬರಲಿದೆ. ದೀಪ ಆರುವ ಮುನ್ನ ಜೋರಾಗಿ ಉರಿಯುತ್ತದೆ. ಕಾಲವೇ ನಿಮಗೆ ಉತ್ತರ ಹೇಳಲಿದೆ. ಯಾರು ಯಾರ ವಿರುದ್ಧ ಮುಗಿ ಬೀಳುತ್ತಾರೆ? ಯಾರು ಎಲ್ಲಿರುತ್ತಾರೆ ಎಂಬುದನ್ನು ಕೆಲವೇ ದಿನಗಳು ಕಾದು ನೋಡಿ. ಕಾಂಗ್ರೆಸ್‌ ಪಡಸಾಲೆಯಲ್ಲೇ ನಿಮಗೆ ಉತ್ತರ ಸಿಗಲಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಲೋಕಸಭೆ ಚುನಾವಣೆ ಬಳಿಕ ತಂದೆ–ಮಕ್ಕಳನ್ನು ಬಿಜೆಪಿಯಲ್ಲಿ ಮೂಲೆಗುಂಪು ಮಾಡುತ್ತಾರೆ. ವಿಜಯೇಂದ್ರ ತಲೆದಂಡಕ್ಕಾಗಿ ಹಲವರು ಕಾದಿದ್ದಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ತಿರುಗೇಟು ನೀಡಿದ್ದಾರೆ.

ADVERTISEMENT

‘ನೀವು ಮುಖ್ಯಮಂತ್ರಿಯಾಗುವ ವೇಳೆ ಡಿ.ಕೆ.ಶಿವಕುಮಾರ್ ಅವರೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆ ಬದಿಗೊತ್ತಿ, ಹೈಕಮಾಂಡ್‌ ಸೂತ್ರ ಧಿಕ್ಕರಿಸುವ ನಿಮ್ಮ ತಂತ್ರದ ಜಾಡು ಹಿಡಿದಿರುವ ನಿಮ್ಮ ವಿರೋಧಿ ಬಣ ಸುಮ್ಮನೆ ಕುಳಿತಿಲ್ಲ. ಮುಖ್ಯಮಂತ್ರಿ ಅಧಿಕಾರ ಹಂಚಿಕೆಯ ಕಾಲ ಸನ್ನಿಹಿತವಾಗುವುದರೊಳಗೇ ಪರಿಸ್ಥಿತಿ ಯಾವ ರೀತಿ ಬಿಗಡಾಯಿಸುತ್ತದೆ ಎನ್ನುವುದನ್ನು ಕಾಂಗ್ರೆಸ್‌ನಲ್ಲಿ ವ್ಯೂಹ ರಚಿಸುವ ಬಂಡೆಯೊಂದು ಈಗಾಗಲೇ ಸದ್ದು ಮಾಡುತ್ತಿದೆ’ ಎಂದು ಹೇಳಿದ್ದಾರೆ.

‘ಭಾರತೀಯ ಜನತಾ ಪಕ್ಷ ತತ್ವ, ಸಿದ್ಧಾಂತ ಆಧರಿಸಿದ ಶಿಸ್ತಿನ ಪಕ್ಷ. ಕಳೆಯಿಲ್ಲದೆ ಬೆಳೆದು ನಿಂತಿರುವ ಸಮೃದ್ಧ ತೋಟ, ನಿಮ್ಮ ಕಾಂಗ್ರೆಸ್‌ನಲ್ಲಿರುವ ಪಾರ್ಥೇನಿಯಂ ಗಿಡಗಳು ನಮ್ಮಲ್ಲಿಲ್ಲ. ಅಧಿಕಾರಕ್ಕಾಗಿ ಹಪಾಹಪಿಸುವ ಕಳ್ಳಿ ಗಿಡಗಳಾವುವೂ ನಮ್ಮ ಪಕ್ಷದಲ್ಲಿ ತಲೆಯೆತ್ತಲು ಸಾಧ್ಯವಿಲ್ಲ. ತಲೆ ಎತ್ತಲು ಹೋದರೆ ಅದಕ್ಕೆ ಮದ್ದು ನೀಡುವಷ್ಟು ನಮ್ಮ ವರಿಷ್ಠ ಮಂಡಳಿಯು ಸಶಕ್ತವಾಗಿದೆ’ ಎಂದಿದ್ದಾರೆ.

‘ಭಾರತದ ರಾಜಕೀಯ ಭೂಪಟದಲ್ಲಿ ಮಾಸಿ ಹೋಗುತ್ತಿರುವ ನಿಮ್ಮ ಕಾಂಗ್ರೆಸ್‌ ಪಕ್ಷ ಅಧಿಕಾರ ಕಬಳಿಸುವುದನ್ನಷ್ಟೇ ಕೇಂದ್ರೀಕರಿಸಿ ಸುಳ್ಳು ಭರವಸೆಗಳು ಹಾಗೂ ಆಮಿಷಗಳ ಬಲೆ ಹೆಣೆದು ಕರ್ನಾಟಕದಲ್ಲಿ ಅಧಿಕಾರ ದಕ್ಕಿಸಿಕೊಂಡಿದೆ. ಲೋಕಸಭಾ ಚುನಾವಣೆಯ ನಂತರ ಈ ಟೊಳ್ಳು ಬಲೆಯನ್ನು ಜನರೇ ತುಂಡರಿಸಲಿದ್ದಾರೆ. ನಿಮ್ಮ ಬಣ ರಾಜಕೀಯದ ಕಿತ್ತಾಟ ಶೀಘ್ರವೇ ಬಯಲಿಗೆ ಬರಲಿದೆ’ ಎಂದು ವಿಜಯೇಂದ್ರ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.