ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ವೇಳೆ ಚುನಾವಣಾ ಅಕ್ರಮ ನಡೆಸಿದ ಆರೋಪದಡಿ ನಿಪ್ಪಾಣಿ ಶಾಸಕಿ ಶಶಿಕಲಾ ಅಣ್ಣಾಸಾಹೇಬ ಜೊಲ್ಲೆ ವಿರುದ್ದ ದಾಖಲಿಸಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.
ಪ್ರಕರಣ ರದ್ದು ಕೋರಿ ಶಶಿಕಲಾ ಜೊಲ್ಲೆ ಸಲ್ಲಿಸಿದ್ದ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣ’ಗಳ ವಿಶೇಷ ಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಶುಕ್ರವಾರ ವಿಚಾರಣೆ ನಡೆಸಿದರು.
ವಿಚಾರಣೆ ವೇಳೆ ಶಶಿಕಲಾ ಜೊಲ್ಲೆ ಪರ ವಾದ ಮಂಡಿಸಿದ ವಕೀಲ ಶಿವರಾಜ್ ಎಸ್.ಬಳ್ಳೊಳಿ, ‘ಇದೊಂದು ರಾಜಕೀಯ ದುರುದ್ದೇಶದಿಂದ ಕೂಡಿದ ಪ್ರಕರಣ. ಅರ್ಜಿದಾರರ ಏಜೆಂಟ್ ಜೇಬಿನಲ್ಲಿ ₹ 10 ಸಾವಿರ ನಗದು ಇತ್ತು ಎಂಬ ಏಕೈಕ ಕಾರಣಕ್ಕೆ ಈ ಪ್ರಕರಣ ದಾಖಲಿಸಲಾಗಿದೆ. ಈ ಹಣ ಲಂಚದ ಹಣ ಎಂಬುದನ್ನು ಸಾಬೀತುಪಡಿಸಲು ಯಾವುದೇ ಸಾಕ್ಷ್ಯಗಳಿಲ್ಲ’ ಎಂದು ಮನವರಿಕೆ ಮಾಡಿಕೊಟ್ಟರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಪ್ರಕರಣ ರದ್ದುಪಡಿಸಿ ಆದೇಶಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.