ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯ ತಾಲ್ಲೂಕಿನ ಏಳಿಗೆಹುಂಡಿ ಗ್ರಾಮದಲ್ಲಿ ಬುಧವಾರ ವಿಧಾನಸಭೆ ಚುನಾವಣೆಯ ಮತದಾನ ಬಹಿಷ್ಕರಿಸಿದ್ದ ಗ್ರಾಮಸ್ಥರನ್ನು ಅಧಿಕಾರಿಗಳು ಮನವೊಲಿಸಿದ್ದಾರೆ.
ಈ ಗ್ರಾಮದಲ್ಲಿ ಒಳಚರಂಡಿ ವ್ಯವಸ್ಥೆ ಇಲ್ಲ, ರಸ್ತೆ ಕಾಮಗಾರಿ ನಡೆದಿಲ್ಲ. ಹೀಗಾಗಿ, ಮತದಾನ ಮಾಡುವುದಿಲ್ಲ ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದರು. ಇದರಿಂದಾಗಿ ಬೆಳಿಗ್ಗೆ ಇಲ್ಲಿ ಮತದಾನ ಆರಂಭವಾಗಿರಲಿಲ್ಲ.
ಈ ಹಿನ್ನೆಲೆಯಲ್ಲಿ ಮೈಸೂರು ತಾಲ್ಲೂಕು ತಹಶೀಲ್ದಾರ್ ಹಾಗೂ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಬಿ.ಎನ್.ಗಿರೀಶ್ ಹಾಗೂ ಡಿ.ವೈ.ಎಸ್.ಪಿ. ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿದರು. ನೀವೆಲ್ಲರೂ ಈ ಬಾರಿಯ ಚುನಾವಣೆಯಲ್ಲಿ ನಿಮಗೆ ಇಷ್ಟವಾದ ಅಭ್ಯರ್ಥಿಗೆ ಮತದಾನ ಮಾಡುವ ಮೂಲಕ ಹಕ್ಕನ್ನು ಚಲಾಯಿಸಬೇಕು. ಸಂವಿಧಾನ ನೀಡಿರುವ ಮತದಾನದ ಹಕ್ಕನ್ನು ಪ್ರತಿಯೊಬ್ಬರೂ ಚಲಾಯಿಸಬೇಕು. ಇಂತಹ ಸಂದರ್ಭದಲ್ಲಿ ಬಹಿಷ್ಕಾರ ಮಾಡುವುದು ಸೂಕ್ತವಲ್ಲವೆಂದು ಮತದಾನದ ಮಹತ್ವವನ್ನು ತಿಳಿಸಿದರು. ಗ್ರಾಮಸ್ಥರಿಂದ ಮತದಾನ ಮಾಡಿಸುವಲ್ಲಿ ಯಶಸ್ವಿಯಾದರು.
ಅಲ್ಲಿ ಮಧಾಹ್ನ 2.30ರ ವೇಳೆಗೆ, 159 ಪುರುಷರು ಮತ್ತು 121 ಮಹಿಳೆಯರು ಮತ ಚಲಾಯಿಸಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.