ಬೆಂಗಳೂರು: ವರದಕ್ಷಿಣೆ ಆರೋಪಕ್ಕೆ ಸಂಬಂಧಿಸಿದಂತೆ 20 ವರ್ಷಗಳ ಹಿಂದಿನ ಕ್ರಿಮಿನಲ್ ಪ್ರಕರಣದಲ್ಲಿ ಕನ್ನಡ ಚಲನಚಿತ್ರ ನಟಿ ಅಭಿನಯ, ಅವರ ತಾಯಿ ಜಯಮ್ಮ ಹಾಗೂ ಅಣ್ಣ ಚೆಲುವರಾಜ್‌ಗೆ ಜೈಲು ಶಿಕ್ಷೆ ವಿಧಿಸಿ ಹೈಕೋರ್ಟ್ ತೀರ್ಪು ನೀಡಿದೆ.
‘ಅತ್ತಿಗೆ ಲಕ್ಷ್ಮೀದೇವಿ ಅವರಿಗೆ ವರದಕ್ಷಿಣೆ ಕಿರುಕುಳ ನೀಡಿದ ಪ್ರಕರಣದಲ್ಲಿ ಅಭಿನಯ ಸೇರಿದಂತೆ ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸಿ ಬೆಂಗಳೂರಿನ ಸೆಷನ್ಸ್ ನ್ಯಾಯಾಲಯ ಹೊರಡಿಸಿದ್ದ ಆದೇಶ ರದ್ದುಪಡಿಸಬೇಕು’ ಎಂದು ಕೋರಿ ಪ್ರಾಸಿಕ್ಯೂಷನ್ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಫಿರ್ಯಾದುದಾರರಾದ ಲಕ್ಷ್ಮೀದೇವಿ ಸಹ ಸೆಷನ್ಸ್ ಕೋರ್ಟ್ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದರು.
ಈ ಮೇಲ್ಮನವಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಬಿ.ಪ್ರಭಾಕರ ಶಾಸ್ತ್ರಿ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಒದಗಿಸಿರುವ ಸಾಕ್ಷ್ಯಾಧಾರಗಳು ಆರೋಪಿಗಳು ಕೃತ್ಯ ಎಸಗಿರುವುದನ್ನು ಸಾಬೀತುಪಡಿಸುತ್ತಿವೆ’ ಎಂದು ಹೇಳಿದ್ದು, ಸೆಷನ್ಸ್ ನ್ಯಾಯಾಲಯ 2012ರ ಮಾರ್ಚ್ 9ರಂದು ನೀಡಿದ್ದ ಆದೇಶವನ್ನು ರದ್ದುಪಡಿಸಿತು.
ಪ್ರಕರಣದಲ್ಲಿ ಅಭಿನಯ ಮತ್ತವರ ಕುಟುಂಬ ಸದಸ್ಯರನ್ನು ದೋಷಿಗಳೆಂದು ತೀರ್ಮಾನಿಸಿ 2010ರ ಜ. 5ರಂದು ಬೆಂಗಳೂರಿನ 8ನೇ ಎಸಿಎಂಎಂ ಕೋರ್ಟ್ ಹೊರಡಿಸಿದ್ದ ಆದೇಶವನ್ನು ಎತ್ತಿ ಹಿಡಿದಿದೆ. ಹೈಕೋರ್ಟ್‌ನಲ್ಲಿ ಪ್ರಾಸಿಕ್ಯೂಷನ್ ಪರ ವಿ.ಎಸ್.ವಿನಾಯಕ ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.