ಮದ್ದಿಪಡು(ಆಂಧ್ರಪ್ರದೇಶ): ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮತ್ತು ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ತಿರುಚಿದ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.
ಬೆಳಗ್ಗೆ 10 ಗಂಟೆ ಸುಮಾರಿಗೆ ಹೈದರಾಬಾದ್‌ನ ಜುಬಿಲಿ ಹಿಲ್ಸ್‌ನಲ್ಲಿರುವ ವರ್ಮಾ ಅವರ ನಿವಾಸಕ್ಕೆ ಭೇಟಿ ನೀಡಿದ್ದ ಪ್ರಕಾಶಂ ಜಿಲ್ಲೆಯ ಪೊಲೀಸರು, ಸಮನ್ಸ್ ನೀಡಿದ್ದಾರೆ. ನವೆಂಬರ್ 19ರಂದು ಮದ್ದಿಪಡು ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ನಲ್ಲಿ ಸೂಚಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗುವಂತೆ ವರ್ಮಾ ಅವರಿಗೆ ನೋಟಿಸ್ ನೀಡಲಾಗಿದೆ ಎಂದು ಪ್ರಕಾಶಂ ಜಿಲ್ಲೆಯ ಎಸ್‌ಪಿ ಎ.ಆರ್. ದಾಮೋದರ್ ಹೇಳಿದ್ದಾರೆ.
ನೋಟಿಸ್ ಪಡೆದಿರುವ ವರ್ಮಾ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಂದ್ರಬಾಬು ನಾಯ್ಡು, ಪವನ್ ಕಲ್ಯಾಣ್ ಮತ್ತು ಅವರ ಕುಟುಂಬ ಸದಸ್ಯರ ತಿರುಚಿದ ಚಿತ್ರಗಳನ್ನು ವರ್ಮಾ, ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ ಎಂಬ ಆರೋದಡಿ ಮದ್ದಿಪಡುವಿನ ರಾಮಲಿಂಗಂ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ನವೆಂಬರ್ 11ರಂದು ಪ್ರಕಾಶಂ ಜಿಲ್ಲಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.