ADVERTISEMENT

ನಿರೂಪಕಿ ಅಪರ್ಣಾ ನಿಧನ: ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಸಂತಾಪ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಜುಲೈ 2024, 18:11 IST
Last Updated 11 ಜುಲೈ 2024, 18:11 IST
   

ಬೆಂಗಳೂರು: ನಿರೂಪಕಿ, ನಟಿ ಅಪರ್ಣಾ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ.

ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ‘ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು. ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆಮಾತಾಗಿದ್ದ ಬಹುಮುಖ ಪ್ರತಿಭೆಯೊಂದು ಬಹುಬೇಗ ನಮ್ಮನ್ನು ಅಗಲಿರುವುದು ದುಃಖದ ಸಂಗತಿ. ಮೃತ ಅಪರ್ಣಾಳ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್‌ ಹಂಚಿಕೊಂಡಿರುವ ಉಪಮುಖ್ಯಮಂತ್ರಿ ಡಿಕೆಶಿ ‘ ಸ್ಪಷ್ಟ ಕನ್ನಡದ ಮೂಲಕ ನಿರೂಪಣೆ ಮಾಡಿ ಕನ್ನಡಿಗರ ಮನ ಗೆದ್ದ, ಖ್ಯಾತ ನಿರೂಪಕಿ, ನಟಿ ಶ್ರೀಮತಿ ಅಪರ್ಣ ಅವರ ಸಾವಿನಿಂದ ಮನಸ್ಸಿಗೆ ಅಪಾರ ನೋವುಂಟಾಗಿದೆ. ಅವರ ನಿಧನವು ಕಲಾ ಲೋಕಕ್ಕೆ ತುಂಬಲಾರದ ನಷ್ಟ. ನಿರೂಪಕಿಯಾಗಿ, ನಟಿಯಾಗಿ ದಶಕಗಳಿಂದ ದುಡಿದ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬ ಹಾಗೂ ಸ್ನೇಹಿತರಿಗೆ ನನ್ನ ಸಾಂತ್ವನಗಳು’ ಎಂದು ಬರೆದುಕೊಂಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.