ಬೆಂಗಳೂರು: ನಗರದಲ್ಲಿ ಮಾರ್ಚ್ 24ರಿಂದ 31ರವರೆಗೆ ಹಮ್ಮಿಕೊಳ್ಳಲು ಉದ್ದೇಶಿಸಿದ್ದ 13ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಕೋವಿಡ್ ಕಾರಣದಿಂದಾಗಿ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.
ಕರ್ನಾಟಕ ಚಲನಚಿತ್ರ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಈ ಉತ್ಸವ ಪ್ರತಿ ವರ್ಷ ನಡೆಯುತ್ತದೆ. ಚಿತ್ರೋತ್ಸವದ ಸಂಭ್ರಮಕ್ಕೆ ಕೋವಿಡ್ ತಣ್ಣೀರೆರಚಿದೆ.
ಆರೋಗ್ಯ ಇಲಾಖೆ ನೀಡಿದ ಎಚ್ಚರಿಕೆಯ ಹಿನ್ನೆಲೆಯಲ್ಲಿ ಸೋಮವಾರ ವಾರ್ತಾ ಇಲಾಖೆಯ ಹಿರಿಯ ಅಧಿಕಾರಿಗಳು, ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಯವರ ಜತೆ ಸಭೆ ನಡೆಸಿದರು.
ಚಿತ್ರೋತ್ಸವದಲ್ಲಿ ದೇಶ ವಿದೇಶಗಳಿಂದ ಸುಮಾರು 7 ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಹೀಗಿರುವಾಗ ಕೋವಿಡ್ ನಿಯಮಾವಳಿಗಳನ್ನು ಪಾಲಿಸುವುದು ಕಷ್ಟವಾಗಲಿದೆ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು.
ಕೋವಿಡ್ ಹಾವಳಿ ಸಂಪೂರ್ಣ ನಿಯಂತ್ರಣಕ್ಕೆ ಬಂದ ಬಳಿಕ ಚಿತ್ರೋತ್ಸವ ಹಮ್ಮಿಕೊಳ್ಳಲಾಗುವುದು ಎಂದು ಸಭೆಯಲ್ಲಿ ನಿರ್ಧರಿಸಲಾಯಿತು. ಅದರಂತೆ ಚಿತ್ರೋತ್ಸವವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿ ಸರ್ಕಾರದ ಅಧೀನ ಕಾರ್ಯದರ್ಶಿ (ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಇಲಾಖೆ) ಎಂ.ಜೆಸಿಂತ ಅವರು ಆದೇಶ ಹೊರಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.