ಪಟ್ನಾ:‘ದಿ ಆ್ಯಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್’ ಚಿತ್ರದಲ್ಲಿ ಉನ್ನತ ನಾಯಕರ ಹಾಗೂ ರಾಜಕಾರಣಿಗಳ ವರ್ಚಸ್ಸಿಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸಿ ನಟ ಅನುಪಮ್ ಖೇರ್ ಮತ್ತು ಹಲವರ ವಿರುದ್ಧ ಬಿಹಾರದ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದೆ.
ಖೇರ್, ಅಕ್ಷಯ್ ಖನ್ನಾ ಸೇರಿದಂತೆ ನಟ, ನಟಿಯರ ವಿರುದ್ಧ ವಕೀಲ ಸುಧೀರ್ ಕುಮಾರ್ ಓಝಾ ಎಂಬುವವರು ಮುಜಫ್ಫರ್‌ಪುರದ ಚೀಫ್ ಜ್ಯುಡಿಶಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ದಾವೆ ಹೂಡಿದ್ದಾರೆ. ಇದೇ 8ರಂದು ಸಬ್ ಡಿವಿಷನಲ್ ಜ್ಯುಡಿಶಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದೆ.
ಯುಪಿಎ ಸರ್ಕಾರದ ಅವಧಿಯಲ್ಲಿ ಪ್ರಧಾನಮಂತ್ರಿಯಾಗಿದ್ದ ಡಾ. ಮನಮೋಹನ್ ಸಿಂಗ್ ಪಾತ್ರದಲ್ಲಿ ಅನುಪಮ್ ಖೇರ್ ಕಾಣಿಸಿಕೊಂಡಿದ್ದರೆ, ಸಿಂಗ್ ಅವರ ಮಾಧ್ಯಮ ಸಲಹೆಗಾರ ಸಂಜಯ್ ಬರು ಪಾತ್ರದಲ್ಲಿ ಅಕ್ಷಯ್ ಖನ್ನಾ ನಟಿಸಿದ್ದಾರೆ.
ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ ಪಾತ್ರದಲ್ಲಿ ಕಾಣಿಸಿಕೊಂಡಿರುವ ನಟ, ನಟಿಯರು, ನಿರ್ಮಾಪಕ ಮತ್ತು ನಿರ್ದೇಶಕರ ಹೆಸರನ್ನೂ ದಾವೆಯಲ್ಲಿ ಉಲ್ಲೇಖಿಸಲಾಗಿದೆ.
ಇದೇ 11ರಂದು ಸಿನಿಮಾ ಬಿಡುಗಡೆಯಾಗಲಿದೆ. ಟಿವಿ ವಾಹಿನಿಗಳು ಮತ್ತು ಯೂಟ್ಯೂಬ್‌ನಲ್ಲಿ ಸಿನಿಮಾದ ಪ್ರೊಮೊಗಳನ್ನು ನೋಡಿ ಬೇಸರವಾಗಿವೆ ಎಂದು ಓಝಾ ಹೇಳಿದ್ದಾರೆ.
ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್, ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿಅವರಿಂದ ತೊಡಗಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮತ್ತು ಆಗಿನ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ ಅವರವರೆಗೆ ದೇಶದ ರಾಜಕೀಯ ನಾಯಕರನ್ನು ಸಿನಿಮಾದಲ್ಲಿ ಕೆಟ್ಟದಾಗಿ ಬಿಂಬಿಸಲಾಗಿದೆ ಎಂದು ಓಝಾ ಆರೋಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.