ಚೆನ್ನೈ: ಸೂಪರ್‌ಸ್ಟಾರ್ ರಜನಿಕಾಂತ್ (70) ಗುರುವಾರ ನಿಯಮಿತ ಆರೋಗ್ಯ ತಪಾಸಣೆಗಾಗಿ ಇಲ್ಲಿನ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಂಜೆ 4:30ಕ್ಕೆ ಅವರು ಆಸ್ಪತ್ರೆ ತಲುಪಿರುವುದಾಗಿ ತಿಳಿದು ಬಂದಿದೆ.
'ನಿಯಮಿತವಾಗಿ ನಡೆಸುವ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಯಲ್ಲಿದ್ದಾರೆ' ಎಂದು ರಜನಿಕಾಂತ್ ಅವರ ಪ್ರಚಾರಕ ರಿಯಾಜ್ ಕೆ ಅಹ್ಮದ್ ಹೇಳಿದ್ದಾರೆ.
ಸೋಮವಾರ ದೆಹಲಿಯಲ್ಲಿ ನಡೆದ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಜನಿಕಾಂತ್ ಅವರಿಗೆ 51ನೇ 'ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ' ಪ್ರದಾನ ಮಾಡಲಾಯಿತು. ರಜನಿಕಾಂತ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾಗಿದ್ದರು.
ರಜನಿಕಾಂತ್ ಅಭಿನಯದ 'ಅಣ್ಣಾತ್ತೆ' ಸಿನಿಮಾದ ಟ್ರೈಲರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದು, ನವೆಂಬರ್ 4 ರಂದು ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.
2020ರ ಡಿಸೆಂಬರ್‌ನಲ್ಲಿ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ರಜನಿಕಾಂತ್ ಅವರಿಗೆ ರಕ್ತದೊತ್ತಡದಲ್ಲಿ ಏರುಪೇರು ಉಂಟಾದ ಕಾರಣ ಹೈದರಾಬಾದ್‌ನಲ್ಲಿ ಅಪೋಲೊ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಎರಡು ದಿನಗಳ ಚಿಕಿತ್ಸೆ ನಂತರ ಗುಣಮುಖರಾಗಿದ್ದರು.
ಹಿಂದೆ ಅವರಿಗೆ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆ ನಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.