ADVERTISEMENT

ರಾಜು ಶ್ರೀವಾಸ್ತವ ನಿಧನ: ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ಸೇರಿ ಗಣ್ಯರ ಸಂತಾಪ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಸೆಪ್ಟೆಂಬರ್ 2022, 15:29 IST
Last Updated 21 ಸೆಪ್ಟೆಂಬರ್ 2022, 15:29 IST
ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ರಾಜು ಶ್ರೀವಾಸ್ತವ
ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ರಾಜು ಶ್ರೀವಾಸ್ತವ   

ಮುಂಬೈ: ಬಾಲಿವುಡ್‌ ಹಾಸ್ಯ ಕಲಾವಿದ ರಾಜು ಶ್ರೀವಾಸ್ತವ (58) ಅವರ ನಿಧನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಹೃದಯಾಘಾತಕ್ಕೆ ಒಳಗಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ರಾಜು ಶ್ರೀವಾಸ್ತವ ಬುಧವಾರ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

‘ಖ್ಯಾತ ಹಾಸ್ಯನಟ ರಾಜು ಶ್ರೀವಾಸ್ತವ ಜೀ ಅವರ ಅಕಾಲಿಕ ನಿಧನ ಅತ್ಯಂತ ದುಃಖಕರವಾಗಿದೆ. ಅವರು ತಮ್ಮ ಹಾಸ್ಯಮಯ ಅಭಿನಯದಿಂದ ಪ್ರೇಕ್ಷಕರನ್ನು ಆಕರ್ಷಿಸುವ ಅಸಾಧಾರಣ ಪ್ರತಿಭೆಯನ್ನು ಹೊಂದಿದ್ದರು. ಅವರ ಪ್ರಭಾವದಿಂದಾಗಿ ಭಾರತದಲ್ಲಿ ಹಾಸ್ಯರಂಗಕ್ಕೆ ಹೊಸ ಗುರುತು ಸಿಕ್ಕಿತು. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಟ್ವೀಟ್ ಮಾಡಿದ್ದಾರೆ.

‘ರಾಜು ಶ್ರೀವಾಸ್ತವ ಅವರು ನಗು, ಹಾಸ್ಯ ಮತ್ತು ಸಕಾರಾತ್ಮಕತೆಯಿಂದ ನಮ್ಮ ಜೀವನವನ್ನು ಬೆಳಗಿಸಿದರು. ಅವರ ನಿಧನ ಸುದ್ದಿ ತಿಳಿದು ದುಃಖಿತನಾಗಿದ್ದೇನೆ. ಅವರು ನಮ್ಮನ್ನು ಬೇಗನೆ ಬಿಟ್ಟು ಹೋಗಿದ್ದಾರೆ. ಆದರೆ, ಅಸಂಖ್ಯಾತ ಜನರ ಹೃದಯದಲ್ಲಿ ಸದಾಕಾಲ ನೆಲೆಸಿರುತ್ತಾರೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ’ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ADVERTISEMENT

‘ನಿಮ್ಮ ಜೀವನದುದ್ದಕ್ಕೂ ನೀವು ತುಂಬಾ ನಕ್ಕಿದ್ದೀರಿ ರಾಜು ಭಾಯ್.. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಬಾಲಿವುಡ್ ನಟ ಅಕ್ಷಯ್ ಕುಮಾರ್ ಟ್ವೀಟ್ ಮಾಡಿದ್ದಾರೆ.

‘ನಮ್ಮ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿರುತ್ತೀರಿ. ರಾಜು ಶ್ರೀವಾಸ್ತವ್ ಸರ್ ಶಾಂತಿಯಿಂದ ವಿಶ್ರಾಂತಿ ಪಡೆಯಿರಿ. ಕುಟುಂಬಕ್ಕೆ ನನ್ನ ಸಂತಾಪಗಳು’ ಎಂದು ನಟ ಹೃತಿಕ್ ರೋಷನ್ ಟ್ವೀಟ್ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.