ರಾಮನಗರ: ಕಲರ್ಸ್ ಕನ್ನಡ ಖಾಸಗಿ ವಾಹಿನಿಯ ಬಿಗ್ ಬಾಸ್ ರಿಯಾಲಿಟಿ ಶೋ ಸ್ಪರ್ಧಿ ತನಿಷಾ ಕುಪ್ಪುಂಡ ಅವರು, ಬೋವಿ ಸಮುದಾಯಕ್ಕೆ ಅವಮಾನವಾಗುವಂತಹ ಅವಹೇಳನಕಾರಿ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ, ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಅಖಿಲ ಕರ್ನಾಟಕ ಬೋವಿ ಸಮಾಜದ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಪಿ. ಪದ್ಮಾ ಎಂಬುವರು ನ. 12ರಂದು ನೀಡಿದ್ದರು. ಆ ಮೇರೆಗೆ ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಿಗ್ ಬಾಸ್ ನ ಇತರ ಸ್ಪರ್ಧಾರ್ಥಿಗಳ ಜೊತೆ ತನಿಷಾ ಅವರು ಮಾತನಾಡುವಾಗ ಬೋವಿ ಸಮುದಾಯದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದು ಸಮುದಾಯದ ಭಾವನೆಗೆ ಧಕ್ಕೆ ತಂದಿದ್ದು, ಅವರ ವಿರುದ್ಧ ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕು ಎಂದು ಪದ್ಮಾ ಅವರು ದೂರಿನಲ್ಲಿ ಒತ್ತಾಯಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.