ಕಿರುತೆರೆಯ ಸಾಕಷ್ಟು ಜನಪ್ರಿಯ ಧಾರಾವಾಹಿಗಳ ನಿರ್ದೇಶಕ ವಿನು ಬಳಂಜ ‘ಬೇರ’ ಚಿತ್ರ ನಿರ್ದೇಶಿಸುವ ಮೂಲಕ ಹಿರಿತೆರೆಗೆ ಪಾದಾರ್ಪಣೆ ಮಾಡಿದ್ದಾರೆ.
ಎಸ್.ಎಲ್.ವಿ ಕಲರ್ಸ್ ಲಾಂಛನದಲ್ಲಿ ದಿವಾಕರ ದಾಸ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ‘ಕಳೆದ ನಾಲ್ಕೈದು ವರ್ಷ ನಾನು ವೈಯಕ್ತಿಕ ಕಾರಣದಿಂದ ಕಿರುತೆರೆ ಹಾಗೂ ಹಿರಿತೆರೆಯಿಂದ ದೂರವಿದ್ದೆ. ಆನಂತರ ಒಂದು ಮ್ಯೂಸಿಯಂಗೆ ಹೋಗಿದ್ದಾಗ ಈ ಕಥೆ ಹುಟ್ಟಿದ್ದು. ಆನಂತರ ಮತ್ತೆ ನನ್ನನ್ನು ಸಿನಿಮಾ ಮಾಡಲು ಪ್ರೇರೇಪಿಸಿದ್ದು ನಿರ್ಮಾಪಕ ದಿವಾಕರ್. ತುಳುವಿನಲ್ಲಿ ‘ಬೇರ’ ಎಂದರೆ ಕನ್ನಡದಲ್ಲಿ ವ್ಯಾಪಾರ ಎಂದು ಅರ್ಥ. ಅಮಾಯಕರನ್ನು ಬಳಸಿಕೊಂಡು ಹೇಗೆ ನಾಯಕರಾಗುತ್ತಾರೆ ಹಾಗೂ ‘ಯಾವ ತಾಯಂದ್ರ ಮಕ್ಕಳೂ ಇನ್ನೊಬ್ಬರಿಂದಾಗಿ ಸಾಯಬಾರದು’ ಎಂಬುದೇ ಕಥಾಹಂದರ. ಈ ಚಿತ್ರದಲ್ಲಿ ನಾಯಕ, ನಾಯಕಿ ಎಂಬುದಿಲ್ಲ. ಬರುವ ಎಲ್ಲಾ ಪಾತ್ರಗಳು ಮುಖ್ಯ ಪಾತ್ರಗಳಾಗಿರುತ್ತದೆ. ಸದ್ಯ ಟೀಸರ್ ಬಿಡುಗಡೆ ಮಾಡಿದ್ದೇವೆ. ಮೇ ಅಂತ್ಯಕ್ಕೆ ಚಿತ್ರವನ್ನು ತೆರೆಗೆ ತರುವ ಯೋಜನೆ ಇದೆ’ ಎಂದು ನಿರ್ದೇಶಕ ವಿನು ಬಳಂಜ ತಿಳಿಸಿದರು.
‘ಕೇವಲ ಮೂರು ಜನ ಕೆಲಸಗಾರರಿಂದ ಶುರುವಾದ ಎಸ್ ಎಲ್ ವಿ ಸಂಸ್ಥೆಯಲ್ಲಿ ಇಂದು ನೂರೈವತ್ತು ಜನ ಕೆಲಸಗಾರರಿದ್ದಾರೆ. ಈಗ ಎಸ್ ಎಲ್ ವಿ ಕಲರ್ಸ್ ಲಾಂಛನದಲ್ಲಿ ಮೊದಲ ಚಿತ್ರ ನಿರ್ಮಾಣ ಮಾಡಿದ್ದೇವೆ. ಈ ಚಿತ್ರಕ್ಕೆ ನಿಮ್ಮ ಹಾರೈಕೆ ಇರಲಿ’ ಎಂದು ನಿರ್ಮಾಪಕ ದಿವಾಕರ ದಾಸ ಹೇಳಿದರು.
ದತ್ತಣ್ಣ, ಯಶ್ ಶೆಟ್ಟಿ, ಹರ್ಷಿಕಾ ಪೂಣಚ್ಚ, ಅಶ್ವಿನ್ ಹಾಸನ್, ಚಿತ್ಕಲ ಬಿರಾದಾರ್, ಮಂಜುನಾಥ್ ಹೆಗಡೆ, ಗುರು ಹೆಗಡೆ, ರಾಕೇಶ್ ಮಯ್ಯ, ಧವಳ್ ದೀಪಕ್ ಮುಂತಾದವರು ಚಿತ್ರದಲ್ಲಿ ಅಭಿನಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.