ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ 41ನೇ ಸಿನಿಮಾ ‘ಕೃಷ್ಣಂ ಪ್ರಣಯ ಸಖಿ’ಯ ಚಿತ್ರೀಕರಣ ಮುಕ್ತಾಯವಾಗಿದ್ದು, ಚಿತ್ರತಂಡ ರೀರೆಕಾರ್ಡಿಂಗ್ ಆರಂಭಿಸಿದೆ.
ಶ್ರೀನಿವಾಸರಾಜು ಆ್ಯಕ್ಷನ್ ಕಟ್ ಹೇಳಿರುವ ಈ ಸಿನಿಮಾದ ಅಂತಿಮ ಹಂತದ ಚಿತ್ರೀಕರಣ ವಿಯೆಟ್ನಾಂನಲ್ಲಿ ಮುಕ್ತಾಯವಾಗಿದೆ. ಅಲ್ಲಿ ಚಿತ್ರದ ಎರಡು ಹಾಡುಗಳು ಹಾಗೂ ಕೆಲವು ಮಾತಿನ ಭಾಗದ ಚಿತ್ರೀಕರಣ ನಡೆದಿದೆ. ಹಾಡುಗಳಿಗೆ ಶೇಖರ್ ಮಾಸ್ಟರ್ ನೃತ್ಯ ನಿರ್ದೇಶನ ಮಾಡಿದ್ದಾರೆ. ‘ನಿಮ್ಮ ಕೊರಿಯೋಗ್ರಫಿ ಹಾಡುಗಳಲ್ಲಿ ಮ್ಯಾಜಿಕ್ ಸೃಷ್ಟಿಸಿದೆ’ ಎಂದು ‘ಎಕ್ಸ್’ನಲ್ಲಿ ಹೇಳಿದ್ದಾರೆ ಗಣೇಶ್. ಇದರೊಂದಿಗೆ ಚಿತ್ರದ ಚಿತ್ರೀಕರಣ ಸಂಪೂರ್ಣವಾಗಿದೆ. ಗಣೇಶ್, ಮಾಳವಿಕ ನಾಯರ್, ಶರಣ್ಯ ಶೆಟ್ಟಿ ಮುಂತಾದವರು ಈ ಭಾಗದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಸದ್ಯದಲ್ಲೇ ಚಿತ್ರ ತೆರೆಗೆ ಬರಲು ಸಿದ್ಧವಾಗಲಿದೆ ಎಂದಿದೆ ಚಿತ್ರತಂಡ.
ಚಿತ್ರದಲ್ಲಿ ಐದು ಹಾಡುಗಳಿದ್ದು, ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ವೆಂಕಟ್ ಪ್ರಸಾದ್ ಛಾಯಾಚಿತ್ರಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ ಚಿತ್ರಕ್ಕಿದೆ. ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಪ್ರಶಾಂತ್ ಜಿ. ರುದ್ರಪ್ಪ ನಿರ್ಮಾಣ ಮಾಡಿದ್ದಾರೆ. ಶ್ರೀನಿವಾಸಮೂರ್ತಿ, ಸಾಧು ಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘುರಾಮ್, ಮಾನಸಿ ಸುಧೀರ್ ಮುಂತಾದ ಕಲಾವಿದರು ತಾರಾಬಳಗದಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.