ಬೆಂಗಳೂರು: ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ‘ದಾದಾಸಾಹೇಬ್ ಫಾಲ್ಕೆ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ’ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಫೆಬ್ರುವರಿ 20ರಂದು ಮುಂಬೈನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ವರದಿಯಾಗಿದೆ.
ಹಲವು ವಿಭಾಗಗಳಲ್ಲಿ ‘ದಾದಾ ಸಾಹೇಬ್ ಫಾಲ್ಕೆ ಅಂತರರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿ’ ನೀಡಲಾಗುತ್ತಿದೆ. ರಿಷಬ್ ಶೆಟ್ಟಿ ಅವರು ‘ಅತ್ಯಂತ ಭರವಸೆಯ ನಟ’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಪ್ರಶಸ್ತಿ ಸಿಕ್ಕಿರುವುದಕ್ಕೆ ಚಿತ್ರರಂಗದ ಗಣ್ಯರು ಸೇರಿದಂತೆ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ರಿಷಬ್ ಶೆಟ್ಟಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ನಟ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಕಾಂತಾರ’ ಸಿನಿಮಾಕ್ಕೆ ಕನ್ನಡ ಸೇರಿದಂತೆ ತೆಲುಗು, ತಮಿಳು, ಹಿಂದಿಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ರಿಷಬ್ ನಿರ್ದೇಶನ ಮತ್ತು ನಟನೆಯನ್ನು ಪರ ಭಾಷಾ ನಟ–ನಟಿಯರು ಮೆಚ್ಚಿಕೊಂಡಿದ್ದರು.
ಈ ಚಿತ್ರ ವಿಶ್ವದಾದ್ಯಂತ ₹400 ಕೋಟಿಗೂ ಹೆಚ್ಚು ಗಳಿಕೆ ಕಾಣುವ ಮೂಲಕ ಗಲ್ಲಾ ಪೆಟ್ಟಿಗೆಯಲ್ಲೂ ಸಖತ್ ಸದ್ದು ಮಾಡಿತ್ತು.
‘ಕಾಂತಾರ’, ಮನುಷ್ಯ ಮತ್ತು ಪ್ರಕೃತಿಯ ನಡುವಿನ ಸಂಘರ್ಷದ ಕಥೆಯಾಗಿದ್ದು, ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ರಿಷಬ್ ಶೆಟ್ಟಿ ಜೊತೆಗೆ ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ಸೇರಿದಂತೆ ಹಲವು ಪ್ರತಿಭಾವಂತ ಕಲಾವಿದರು ನಟಿಸಿದ್ದಾರೆ. ಹೊಂಬಾಳೆ ಫಿಲಂಸ್ ಚಿತ್ರವನ್ನು ನಿರ್ಮಿಸಿದೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರ ಸಂಗೀತ ಮತ್ತು ಅರವಿಂದ್ ಕಶ್ಯಪ್ ಛಾಯಾಗ್ರಹಣವಿದೆ.
ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.