ADVERTISEMENT

ಸ್ಯಾಂಡಲ್‌ವುಡ್‌ನಲ್ಲಿ ಲೈಂಗಿಕ ದೌರ್ಜನ್ಯ: 16ರಂದು ಚಲನಚಿತ್ರ ವಾಣಿಜ್ಯ ಮಂಡಳಿ ಸಭೆ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2024, 9:23 IST
Last Updated 6 ಸೆಪ್ಟೆಂಬರ್ 2024, 9:23 IST
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ   

ಬೆಂಗಳೂರು: ಕನ್ನಡ ಚಲನಚಿತ್ರೋದ್ಯಮದಲ್ಲಿ ಕಲಾವಿದೆಯರು ಎದುರಿಸುತ್ತಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳ ಅಧ್ಯಯನ ಮಾಡಿ ವರದಿ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಸೆ.16 ರಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಕಲಾವಿದೆಯರು ಹಾಗೂ ಚಿತ್ರರಂಗದ ಪ್ರಮುಖರ ಸಭೆ ನಡೆಯಲಿದೆ.

ಕಲಾವಿದೆಯರು ಎದುರಿಸುತ್ತಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳ ಅಧ್ಯಯನಕ್ಕೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿಯನ್ನು ರಚಿಸುವಂತೆ ಒತ್ತಾಯಿಸಿ ಫಿಲ್ಮ್ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಇಕ್ವಾಲಿಟಿ (ಫೈರ್) ನಿಯೋಗ ಗುರುವಾರ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿತ್ತು. ಅದರ ಬೆನ್ನಲ್ಲೇ ಚಿತ್ರರಂಗದ ಎಲ್ಲರನ್ನೂ ಒಟ್ಟುಗೂಡಿಸಿ ಸಭೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಶುಕ್ರವಾರ ಸೂಚನೆ ನೀಡಿತ್ತು.

‘ಚಿತ್ರರಂಗದಲ್ಲಿ ಕಲಾವಿದೆಯರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸೆ.13ರೊಳಗೆ ಸಭೆ ನಡೆಸಿ ಚರ್ಚಿಸಬೇಕು. ಚಿತ್ರರಂಗದ ನಟಿಯರನ್ನು ಆಹ್ವಾನಿಸಿ ಅವರ ಸಮ್ಮುಖದಲ್ಲಿ ಚಿತ್ರರಂಗದ ಪ್ರಮುಖರೊಂದಿಗೆ ಸಭೆ ನಡೆಸಿ, ಸಮಿತಿ ರಚಿಸಲು ಒತ್ತಾಯಿಸುವಂತೆ ತೀರ್ಮಾನ ತೆಗೆದುಕೊಳ್ಳಿ ಎಂದು ಮಹಿಳಾ ಆಯೋಗ ವಾಣಿಜ್ಯ ಮಂಡಳಿಗೆ ಪತ್ರ ಬರೆದಿದೆ. ಈ ಸಂಬಂಧ ವಾಣಿಜ್ಯ ಮಂಡಳಿಯಲ್ಲಿ ಆಂತರಿಕ ಸಭೆ ನಡೆಸಲಾಗಿದೆ. ಗೌರಿ–ಗಣೇಶ ಹಬ್ಬ ಮತ್ತು ಖಾಸಗಿ ಪ್ರಶಸ್ತಿ ಪ್ರದಾನ ಸಮಾರಂಭಗಳಿಂದಾಗಿ ಸಾಕಷ್ಟು ಕಲಾವಿದರು ಲಭ್ಯವಿಲ್ಲದ ಕಾರಣ ಸೆ.16ಕ್ಕೆ ವಾಣಿಜ್ಯ ಮಂಡಳಿ ಆವರಣದಲ್ಲಿ ಸಭೆ ನಡೆಯಲಿದೆ’ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಗೌರವ ಕಾರ್ಯದರ್ಶಿ ಬಾ ಮಾ ಗಿರೀಶ್‌ ಹೇಳಿದರು.

ADVERTISEMENT

‘ಆ ಸಭೆಗೆ ಚಿತ್ರರಂಗದ ಪ್ರಮುಖರೆಲ್ಲರನ್ನು ಆಹ್ವಾನಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ. ನಗರದ ಪ್ರಮುಖ ಪಬ್‌ಗಳಲ್ಲಿ ನಟ–ನಟಿಯರು ಭಾಗಿಯಾಗಿ ಪಾರ್ಟಿ ನಡೆಸುವುದು ವಾಡಿಕೆಯಾಗಿದೆ. ಸರ್ಕಾರ ಇದಕ್ಕೆ ಮೊದಲು ಕಡಿವಾಣ ಹಾಕಬೇಕು. ಈ ಬಗ್ಗೆಯೂ ಅಂದಿನ ಸಭೆಯಲ್ಲಿ ಚರ್ಚಿಸುತ್ತೇವೆ. ಕಲಾವಿದೆಯರ ಹಿತ ಕಾಪಾಡಲು ವಾಣಿಜ್ಯ ಮಂಡಳಿ ಸದಾ ಬದ್ಧವಾಗಿದೆ’ ಎಂದು ಗಿರೀಶ್‌ ‘ಪ್ರಜಾವಾಣಿ’ಗೆ ತಿಳಿಸಿದರು. 

ಕೇರಳ ಸರ್ಕಾರ, ಮಲಯಾಳಂ ಚಿತ್ರರಂಗದಲ್ಲಾಗುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯದ ಅಧ್ಯಯನಕ್ಕೆ ಹೇಮಾ ಸಮಿತಿ ರಚಿಸಿತ್ತು. ಈ ಸಮಿತಿ ನೀಡಿರುವ ವರದಿ ಚಿತ್ರರಂಗದಲ್ಲಿ ಬಿರುಗಾಳಿ ಎಬ್ಬಿಸಿದೆ. ಕೆಲವು ಹೆಸರಾಂತ ನಟ, ನಿರ್ದೇಶಕರು, ನಿರ್ಮಾಪಕರ ಮೇಲೆ ಲೈಂಗಿಕ ದೌರ್ಜನ್ಯ ಆರೋಪಗಳು ದಾಖಲಾಗಿವೆ. ಇದರ ಬೆನ್ನಲ್ಲೇ ಕನ್ನಡ ಚಿತ್ರರಂಗದಲ್ಲಿಯೂ ಅದೇ ರೀತಿ ಸಮಿತಿ ರಚಿಸಬೇಕೆಂದು ಕಲಾವಿದೆಯರಿಂದ ಒತ್ತಡ ಹೆಚ್ಚಾಗಿದೆ.

‘ರಾಜ್ಯದಲ್ಲಿ ಮೀಟೂ ಪ್ರಕರಣ ಬೆಳಕಿಗೆ ಬಂದಾಗ ವಾಣಿಜ್ಯ ಮಂಡಳಿ ತನ್ನ ಕರ್ತವ್ಯ ನಿಭಾಯಿಸಿತ್ತು. ಇಂಥ ಸಮಸ್ಯೆಗಳ ಪರಿಹಾರಕ್ಕೆ ನಮ್ಮ ವ್ಯಾಪ್ತಿಯಲ್ಲಿ ಸಾಧ್ಯವಿರುವ ಎಲ್ಲ ಯತ್ನಗಳನ್ನು ಮಾಡುತ್ತೇವೆ. ಈ ಹಿಂದೆಯೂ ನಮ್ಮಲ್ಲಿ ಪಾರ್ವತಮ್ಮ ರಾಜ್‌ಕುಮಾರ್‌ ನೇತೃತ್ವದಲ್ಲಿ ಒಂದು ಸಮಿತಿಯಿತ್ತು. ಮತ್ತೆ ಅದೇ ರೀತಿಯ ಸಮಿತಿ ರಚಿಸಲು ನಾವು ಸಿದ್ಧರಿದ್ದೇವೆ’ ಎಂದವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.