ಬೆಂಗಳೂರು: ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ನಟಿ ಲೀಲಾವತಿ (86) ಅಂತಿಮ ದರ್ಶನ ವ್ಯವಸ್ಥೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮನೋಜ್ಞ ಅಭಿನಯದ ಮೂಲಕ ಕನ್ನಡಿಗರ ಕಣ್ಮಣಿಯಾಗಿದ್ದ ಬಹುಭಾಷಾ ತಾರೆ ಲೀಲಾವತಿ ಅವರು ಶುಕ್ರವಾರ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಲೀಲಾವತಿ ಅವರು ಕನ್ನಡ, ತಮಿಳು ಹಾಗೂ ತೆಲುಗು ಭಾಷೆಗಳ 600ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು. ಕನ್ನಡದಲ್ಲಿಯೇ 400ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಅವರ ಪುತ್ರ ವಿನೋದ್ ರಾಜ್ ಕೂಡ ಸಿನಿಮಾ ನಟರಾಗಿದ್ದಾರೆ.
ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲಿ ಲೀಲಾವತಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 10:45ರಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣಕ್ಕೆ ಲೀಲಾವತಿ ಅವರ ಪಾರ್ಥಿವ ಶರೀರ ಬರಲಿದೆ. ಅಲ್ಲಿ ಗಣ್ಯರಿಗೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 11 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ಕೊಡಲಿದ್ದು, ಅಂತಿಮ ನಮನ ಸಲ್ಲಿಸಲಿದ್ದಾರೆ. ಮಧ್ಯಾಹ್ನ 2:15ರ ನಂತರ ಲೀಲಾವತಿ ಪಾರ್ಥಿವ ಶರೀರವನ್ನು ನೆಲಮಂಗಲದ ತೋಟದ ಮನೆಗೆ ತೆಗೆದುಕೊಂಡು ಹೋಗಲಾಗುವುದು, ಅಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.